Breaking News- ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ

Update: 2019-07-09 12:40 GMT

ಬೆಂಗಳೂರು, ಜು.9: ಕಾಂಗ್ರೆಸ್-ಜೆಡಿಎಸ್ ಪಕ್ಷದ 13 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ರಾಜೀನಾಮೆಯ ಬೆನ್ನಲ್ಲೆ, ಕಾಂಗ್ರೆಸ್ ಪಕ್ಷದಿಂದ ಅಮಾನತ್ತು ಆಗಿರುವ ಶಿವಾಜಿನಗರದ ಶಾಸಕ ಆರ್.ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್‌ರನ್ನು ಭೇಟಿ ಮಾಡಿದ ರೋಷನ್ ಬೇಗ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ವೇಳೆ ಸ್ಪೀಕರ್ ಕಚೇರಿಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಕೃಷ್ಣಭೈರೇಗೌಡ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದಾಗ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕಾರಣ ಎಂದು ಬಹಿರಂಗವಾಗಿ ರೋಷನ್ ಬೇಗ್ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಅವರನ್ನು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಲ್ಲದೆ, ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತ್ತು ಮಾಡಲಾಗಿತ್ತು. ಆಗಲೂ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ರೋಷನ್ ಬೇಗ್ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದರು. ಇದೀಗ ಅಂತಿಮವಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News