ಆಪರೇಷನ್ ಕಮಲಕ್ಕೆ ಬಿಜೆಪಿ ಕುಮ್ಮಕ್ಕು ಆರೋಪ: ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ

Update: 2019-07-09 13:29 GMT

ಬೆಂಗಳೂರು, ಜು.9: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈನಲ್ಲಿ ತಂಗಿರುವ ಅತೃಪ್ತ ಶಾಸಕರು ಹಾಗೂ ಆಪರೇಷನ್ ಕಮಲಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕತ್ವದ ವಿರುದ್ಧ ಕಾಂಗ್ರೆಸ್ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಚುನಾಯಿತ ಸರಕಾರವನ್ನು ಅಸ್ತಿರಗೊಳಿಸಿ, ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೆರವು ನೀಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೇರಿದ ಎಲ್ಲ ಶಾಸಕರು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾ ಧರಣಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News