ವಿವಿಧ ಬೇಡಿಕೆಗಳಿಗೆ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರ ಧರಣಿ
ಬೆಂಗಳೂರು, ಜು.9: ಹಳೆ ಪಿಂಚಣಿ ಯೋಜನೆಯಲ್ಲಿ ಮುಂದುವರಿಸಿ, ಮತ್ತೊಮ್ಮೆ ಕೋರಿಕೆ ವರ್ಗಾವಣೆ ನಡೆಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಧರಣಿ ನಡೆಸಿದರು.
ಮಂಗಳವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಜಮಾಯಿಸಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂರಾರು ಸದಸ್ಯರು, ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಪದವಿ ಪೂರ್ಣಗೊಳಿಸಿರುವ ಶಿಕ್ಷಕರರೆಂದು ಪರಿಗಣಿಸಿಬೇಕು. ವೇತನ ನಿಗದಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು
ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಒಬ್ಬರೇ ಶಿಕ್ಷಕರನ್ನು ನಿಯೋಜಿಸಬೇಕು. ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸಿ, ಮುಖ್ಯೋಪಾಧ್ಯಾಯ ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸಬೇಕು ಎಂದು ಮನವಿ ಮಾಡಿದರು.
6ನೆ ವೇತನ ಆಯೋಗದ ಅಂತಿಮ ಶಿಫಾರಸ್ಸಿನ ಅನ್ವಯ ಮುಖ್ಯ ಗುರುಗಳಿಗೆ ಮುಂಭಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ, ಎಲ್ಲ ಸೌಲಭ್ಯಗಳನ್ನು ನೀಡಬೇಕೆಂದು ಎಂದು ಸಂಘದ ಅಧ್ಯಕ್ಷ ಎಂ. ನಾರಾಯಣಸ್ವಾಮಿ ಒತ್ತಾಯ ಮಾಡಿದರು.