ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಧರಣಿ
ಶಿವಮೊಗ್ಗ, ಜು. 9: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮಂಗಳವಾರ ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿತು. ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಅರ್ಪಿಸಿತು.
ಶಾಲೆಗಳಿಗೆ ಶಿಕ್ಷಕರು ಗೈರು ಹಾಜರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದರಿಂದ ಶಿವಮೊಗ್ಗ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಸರ್ಕಾರಿ ಪ್ರಾಥಮಿಕ ಶಾಲೆಗಳ ಪಾಠ-ಪ್ರವಚನದ ಮೇಲೆ ಪರಿಣಾಮ ಬೀರುವಂತಾಗಿತ್ತು.
ಬೇಡಿಕೆಗಳೇನು?: 2014 ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1 ರಿಂದ 5 ನೇ ತರಗತಿಗೆ ಸೀಮಿತಗೊಳಿಸಿದ ಆದೇಶವನ್ನು ತಕ್ಷಣ ರದ್ದುಗೊಳಿಸಬೇಕು. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷಕರನ್ನು ನಿಯೋಜಿಸಬೇಕು. ಪದವೀಧರ ಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಬೇಕು.
ಕಳೆದ 3 ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯದಿರುವುದರಿಂದ ಶೇಕಡವಾರು ಆಧಾರದ ಮೇಲೆ ಏಕಕಾಲಕ್ಕೆ ವರ್ಗಾವಣೆ ಪ್ರಕ್ರಿಯೆ ನಡೆಸಬೇಕು. ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿನ ನ್ಯೂನ್ಯತೆ ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಓರ್ವ ಶಿಕ್ಷಕರನ್ನು ಪರಿಗಣಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರನ್ನು ಉಪ ನಿರ್ದೇಶಕ ಹುದ್ದೆಯವರೆಗೆ ಭಡ್ತಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹಬಲೇಶ್ವರ ಹೆಗಡೆ, ಪ್ರಧಾನ ಕಾರ್ಯದರ್ಶಿ ಡಿ.ಬಿ.ರುದ್ರಪ್ಪ, ಪ್ರಮುಖರಾದ ಸಿ.ಜಯಪ್ಪ, ಪಾಪಯ್ಯ, ಸುಮತಿ, ಸತೀಶ್, ಗಂಗಾನಾಯ್ಕ್, ವಾಣಿ, ಲೋಲಾಕ್ಷಿ, ಬಸವಂತರಾವ್ ಸೇರಿ ಹಲವರಿದ್ದರು.