ಎಸ್.ಮೂರ್ತಿ ಅಮಾನತು ಆದೇಶ: ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ

Update: 2019-07-10 18:03 GMT

ಬೆಂಗಳೂರು, ಜು.10: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್.ಮೂರ್ತಿ ಅವರು ಮೇಲ್ಮನವಿಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸಲು ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಈ ಕುರಿತು ಎಸ್.ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್.ಮೂರ್ತಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ವಿಧಾನಸಭೆ ಅಧೀನ ಕಾರ್ಯದರ್ಶಿ 2018ರ ಡಿ.27ರಂದು ಆದೇಶ ಹೊರಡಿಸಿದ್ದರು.

2016-17ರ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೂರ್ತಿ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ರಿಟ್ ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಮೂರ್ತಿ ಅವರು ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News