ಬಿಬಿಎಂಪಿ ವಿಭಜನೆ: ವಿಧೇಯಕ ಹಿಂಪಡೆಯಲು ಸಂಪುಟ ತೀರ್ಮಾನ

Update: 2019-07-11 17:19 GMT

ಬೆಂಗಳೂರು, ಜು. 11: ಆಡಳಿತಾತ್ಮಕ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗಗಳಾಗಿ ವಿಂಗಡಿಸುವ ಸಂಬಂಧದ ವಿಧೇಯಕಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಅದನ್ನು ಹಿಂಪಡೆಯಲು ಸಂಪುಟ ತೀರ್ಮಾನಿಸಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ವಿಧೇಯಕವನ್ನು ಕೇಂದ್ರ ಸರಕಾರ ಕೆಲ ವರ್ಷಗಳಿಂದ ಅನುಮೋದನೆ ನೀಡುತ್ತಿಲ್ಲ. ಹೀಗಾಗಿ ಬೇರೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ. ಆದುದರಿಂದ ವಿಧೇಯಕ ಹಿಂಪಡೆಯಲು ನಿರ್ಧರಿಸಲಾಗಿದೆ ಎಂದರು.

ಬಿಬಿಎಂಪಿ ವಿಭಜನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿ ಬಿ.ಎಸ್.ಪಾಟೀಲ್ ಅವರ ವರದಿಯನ್ನು ಸರಕಾರ ತಿರಸ್ಕರಿಸಿದೆ ಎಂದು ಅರ್ಥವಲ್ಲ. ಆದರೆ, ಆಡಳಿತಾತ್ಮಕ ದೃಷ್ಟಿಯಿಂದ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಯಾರು ಹೊಣೆ: ಜಿಂದಾಲ್ ಕಂಪೆನಿಗೆ ಭೂಮಿ ಮಂಜೂರು ವಿಚಾರಕ್ಕೆ ಸಂಬಂಧಿಸಿದಂತೆ ಸಂಪುಟ ಉಪಸಮಿತಿ ಪೂರ್ಣ ಮಾಹಿತಿ ಕೇಳಿದೆ. ಹೀಗಿರುವಾಗ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿ ಬಂದ ಹಿನ್ನೆಲೆಯಲ್ಲಿ ರೈತರು ಬೀದಿಗೆ ಇಳಿದಿದ್ದು, ಮುಂದೇ ಏನಾದರೂ ಸಂಭವಿಸಿದರೆ ಅದಕ್ಕೆ ಹೊಣೆ ಯಾರು ಎಂದು ಅವರು ಇದೇ ವೇಳೆ ಪ್ರಶ್ನಿಸಿದರು.

ಸರಕಾರ ಮತ್ತು ಮಾಧ್ಯಮಗಳಿಗೂ ಸಮಾನ ಜವಾಬ್ದಾರಿ ಇದೆ ಎಂಬುದನ್ನು ಅರಿತುಕೊಳ್ಳಬೇಕು. ರಾಜಕೀಯ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸರಕಾರಕ್ಕೂ ಸಾಮಾನ್ಯ ಜ್ಞಾನ ಎಂಬುದು ಇದೆ. ಯಾವುದೇ ತೀರ್ಮಾನ ಕೈಗೊಳ್ಳಬೇಕಿದ್ದರೂ ಆಲೋಚಿಸಿ ಕ್ರಮ ಕೈಗೊಳ್ಳಲಿದೆ ಎಂದು ಕೃಷ್ಣಭೈರೇಗೌಡ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News