ಎಚ್‌ಡಿಡಿ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

Update: 2019-07-11 18:13 GMT

ಬೆಂಗಳೂರು, ಜು.11: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ವಿಚಾರವಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಟ್ರೋಲ್ ಮಗಾ ಫೇಸ್ ಬುಕ್ ಪುಟದ ಅಡ್ಮಿನ್ ಎಸ್.ಜೈಕಾಂತ್ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಎರಡು ಕಡೆಯ ವಾದವನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.

ಈ ಕುರಿತು ಎಸ್.ಜೈಕಾಂತ್ ಅವರು ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಎಂ.ಅರುಣ್ ಶ್ಯಾಮ್ ಅವರು, ದೇವೇಗೌಡ ಅವರ ಕುಟುಂಬದ ವಿರುದ್ಧ ಫೇಸ್‌ಬುಕ್ ಪೇಜ್‌ನಲ್ಲಿ ಅವಹೇಳಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಒಂದೆ ವಿಷಯದ ಪೋಸ್ಟ್‌ಗೆ ಎರಡು ಎಫ್‌ಐಆರ್ ದಾಖಲಿಸಿ, ಕಾನೂನನ್ನು ಉಲ್ಲಂಘಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಸರಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು, ದೇವೇಗೌಡ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಯ ಪೋಸ್ಟ್ ಅನ್ನು ಎರಡು ಬಾರಿ ಹಾಕಿದ್ದರಿಂದ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತು.

ಪ್ರಕರಣವೇನು: ಜೆಡಿಎಸ್ ಮುಖಂಡರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್‌ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಪೋಸ್ಟ್‌ಗಳನ್ನು 2019ರ ಮೇ 26ರಂದು ಟ್ರೋಲ್ ಮಗಾ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಪ್ರಕಟಿಸಿ ತೇಜೋವಧೆಗೆ ಯತ್ನಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಪ್ರದೀಪ್‌ಕುಮಾರ್ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News