ಕೆರೆ ಜಾಗದಲ್ಲಿ ದೇವಸ್ಥಾನ ನಿರ್ಮಾಣ: ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಆದೇಶ

Update: 2019-07-12 17:29 GMT

ಬೆಂಗಳೂರು, ಜು.12: ಕನಕಪುರ ನಗರದಲ್ಲಿ ಕೆರೆ ಜಾಗವನ್ನು ಒತ್ತುವರಿಗೊಳಿಸಿ ದೇವಸ್ಥಾನ ನಿರ್ಮಾಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕನಕಪುರ ತಹಶೀಲ್ದಾರ್‌ಗೆ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಲು ಆದೇಶ ನೀಡಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, 20 ಎಕರೆ ಕೆರೆ ಜಾಗದಲ್ಲಿ 4 ಎಕರೆ ಜಾಗವನ್ನು ಎಪಿಎಂಸಿ ಹಾಗೂ ತೋಟಗಾರಿಕೆ ಇಲಾಖೆಯವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, 8 ಗುಂಟೆ ಜಾಗವನ್ನು ದೇವಸ್ಥಾನದವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ದೇವಸ್ಥಾನ ನಿರ್ಮಾಣದಿಂದ ಸುಪ್ರೀಂಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿದಂತಾಗಿದೆ. ಅಲ್ಲದೆ, 2013ರ ಎ.9ರಂದು ಹೈಕೋರ್ಟ್ ವಿಭಾಗೀಯ ಪೀಠವೇ ಕನಕಪುರದ 20 ಎಕರೆ ಕೆರೆ ಜಾಗವನ್ನು ಸಂಬಂಧಪಟ್ಟ ಇಲಾಖೆಯವರು ಉಸ್ತುವಾರಿ ನೋಡಿಕೊಳ್ಳಬೇಕೆಂದು ಆದೇಶಿಸಿತ್ತು. ಆದರೆ, ಈಗಾಗಲೇ ರಾಜ್ಯ ಸರಕಾರ 16.29 ಎಕರೆ ಜಾಗವನ್ನು ವಿವಿಧ ಉದ್ದೇಶಗಳಿಗೆ ಬಳಸಿಕೊಂಡಿದೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಕನಕಪುರ ತಹಶೀಲ್ದಾರ್‌ಗೆ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News