ಯಾವುದೇ ಬಿಜೆಪಿ ಶಾಸಕರು ಪಕ್ಷ ತೊರೆಯುವುದಿಲ್ಲ: ಕೆ.ಎಸ್.ಈಶ್ವರಪ್ಪ

Update: 2019-07-14 13:14 GMT

ಶಿವಮೊಗ್ಗ, ಜು.14: 'ಬಿಜೆಪಿ ಶಾಸಕರು ಸಿಂಹದ ಮರಿಗಳಿದ್ದಂತೆ. ಪಕ್ಷದ ಯಾವುದೇ ಶಾಸಕರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ' ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 

ರವಿವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೈತ್ರಿ ಸರ್ಕಾರದ ದುರಾಡಳಿತದಿಂದ ಬೇಸತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಎಂಎಲ್‍ಎಗಳು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಪಕ್ಷಗಳಿಗೆ ಸೇರಿದ ಇನ್ನೂ ಅನೇಕ ಅತೃಪ್ತ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಈ ಬಾರಿ ಮೈತ್ರಿ ಸರ್ಕಾರ ಪತನವಾಗುವುದು ನಿಶ್ಚಿತವಾಗಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು. 

ಸಿದ್ದರಾಮಯ್ಯರವರು ಬಿಜೆಪಿ ಪಕ್ಷ ಆಪರೇಷನ್ ಕಮಲ ಮಾಡುತ್ತಿದೆ ಎಂದು ದೂರುತ್ತಿದ್ದಾರೆ. ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಯೋಗ್ಯತೆ ಅವರಿಗಿಲ್ಲದೆ, ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ನಾಚಿಕೆಯಾಬೇಕು ಎಂದು ಟೀಕಿಸಿದ್ದಾರೆ. 

ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ಬಿಜೆಪಿ ಸೇರ್ಪಡೆಗೆ ಅವಕಾವಿಲ್ಲ ಎಂದು ಈಗಾಗಲೇ ಬಿ.ಎಸ್.ಯಡಿಯೂರಪ್ಪರವರು ಸ್ಪಷ್ಟಪಡಿಸಿದ್ದಾರೆ. ಆದರೆ ಕೆಲ ಮಾಧ್ಯಮಗಳು ದಿನಕ್ಕೊಂದು ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸುವ ಕಾರ್ಯ ನಡೆಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News