ಮೆರಿಟ್ ಆಧಾರದಲ್ಲಿ ಸೀಟುಗಳ ಭರ್ತಿಗೆ ಸೂಚನೆ

Update: 2019-07-16 15:28 GMT

ಬೆಂಗಳೂರು, ಜು.16: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕೆಲಸ ಮಾಡುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಭರ್ತಿಯಾಗದೇ ಉಳಿದುಕೊಂಡಿರುವ ಸೀಟುಗಳನ್ನು ಮೆರಿಟ್ ಆಧಾರದಲ್ಲಿ ಭರ್ತಿ ಮಾಡುವಂತೆ ಇಲಾಖೆಯ ಆಯುಕ್ತ ಅನ್ಬುಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

2019-20ನೇ ಸಾಲಿನಲ್ಲಿ 18 ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸ್ವೀಕರಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಒಟ್ಟು 636 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನಿರ್ವಹಿಸುತ್ತಿದ್ದು, 121 ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾತಿಗಿಂತಲೂ ಕಡಿಮೆ ದಾಖಲಾತಿ ಇದೆ. ಹೀಗಾಗಿ, ಇಲ್ಲಿ ಬಾಕಿಯಿರುವ ಸೀಟುಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸುವ ದೃಷ್ಟಿಯಿಂದ ಹಾಸ್ಟೆಲ್‌ಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಿಕೊಳ್ಳಲು ಕ್ರಮ ಕೈಗೊಳ್ಳಬೇಕಾಗಿದೆ. 2019-20ನೇ ಸಾಲಿನಲ್ಲಿ ವಿದ್ಯಾರ್ಥಿ ನಿಲಯಗಳ ಪ್ರವೇಶಾವಕಾಶ ಕೋರಿ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ನಿಲಯಗಳಿಗೆ ದಾಖಲು ಮಾಡಲು ಕ್ರಮ ಕೈಗೊಳ್ಳುವುದು ಜಿಲ್ಲಾ ಮಟ್ಟದ ಅಧಿಕಾರಿಗಳ ಕರ್ತವ್ಯ ಎಂದು ಹೇಳಿದ್ದಾರೆ.

ರಾಜ್ಯದ ಕೆಲವು ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾತಿಗಿಂತಲೂ ಹೆಚ್ಚಿನ ಪ್ರವೇಶಾವಕಾಶ ಕಲ್ಪಿಸುತ್ತಿದ್ದುದರಿಂದ ಆಗುತ್ತಿದ್ದ ತೊಂದರೆಗಳನ್ನು ನಿವಾರಿಸಲು ಮಂಜೂರಾತಿ ಸಂಖ್ಯೆಗಿಂತ ಹೆಚ್ಚು ಪ್ರವೇಶಾವಕಾಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News