ಜು.18: ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Update: 2019-07-17 12:37 GMT

ಮಂಗಳೂರು, ಜು.17: ಯುವಜನತೆಯಲ್ಲಿ ದುಶ್ಚಟಗಳ ಕುರಿತಂತೆ ಅರಿವು ಮೂಡಿಸಿ, ಆರೋಗ್ಯವಂತ ಯುವಪೀಳಿಗೆಯನ್ನು ನಿರ್ಮಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸ್ವಾಸ್ಥ್ಯ ಸಂಕಲ್ಪ ಉದ್ಘಾಟನೆ, ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಾಗೂ ಜನ ಜಾಗೃತಿ ಜಾಥಾ ಕಾರ್ಯಕ್ರಮವು ಜು.18ರಂದು ಬೆಳಗ್ಗೆ 10:15ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹಾಬಲ ಚೌಟ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜನಜಾಗೃತಿ ಜಾಥಾ ಬೆಳಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್ ವೃತ್ತ(ಜ್ಯೋತಿ)ದಿಂದ ಆರಂಭವಾಗಲಿದೆ. ಜಾಥಾವನ್ನು ಡಿಸಿಪಿ ಲಕ್ಷ್ಮೀ ಗಣೇಶ್ ಉದ್ಘಾಟಿಸುವರು. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟನೆ ನೆರವೇರಿಸುವರು ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮಂಗಳೂರು ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಗಳೂರು ತಾಲೂಕಿನಲ್ಲಿ 54 ಮದ್ಯವರ್ಜನ ಶಿಬಿರವನ್ನು ನಡೆಸಿ 2,500ಕ್ಕೂ ಅದಿ ವ್ಯಸನಿಗಳನ್ನು ಮದ್ಯಮುಕ್ತರನ್ನಾಗಿಸಲಾಗಿದೆ. ಅಲ್ಲದೆ ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಇದುವರೆಗೆ 831 ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸುಮಾರು 1,19,282 ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದು ಮಹಾಬಲ ಚೌಟ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಉಮರಬ್ಬ, ನಿರ್ದೇಶಕ ಸತೀಶ್ ಶೆಟ್ಟಿ, ಉಪಾಧ್ಯಕ್ಷ ಉದಯ ಆಳ್ವ, ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News