ಪ್ರತಿ ತಾಲೂಕಿನಲ್ಲಿ ಗೋ ಶಾಲೆ ಸ್ಥಾಪನೆಗೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2019-07-19 16:59 GMT

ಬೆಂಗಳೂರು, ಜು.19: ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿನಲ್ಲಿ ಗೋ ಶಾಲೆಗಳನ್ನು ಸ್ಥಾಪಿಸಬೇಕು. ಹಾಗೂ ಗೋ ಶಾಲೆಯಲ್ಲಿರುವ ಜಾನುವಾರುಗಳ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತು ಹೈಕೋರ್ಟ್ ಕಾನೂನು ಸೇವಾ ಸಮಿತಿ ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ನಿವಾಸಿ ಎ.ಮಲ್ಲಿಕಾರ್ಜುನ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರಾದ ಎ.ಮಲ್ಲಿಕಾರ್ಜುನ ಅವರು ವಾದಿಸಿ, ಬರಗಾಲ ಇರುವ ತಾಲೂಕುಗಳಿಗೆ ಹೆಚ್ಚಿನ ಗಮನವನ್ನು ನೀಡಿ ಜಾನುವಾರುಗಳಿಗೆ ಮೇವು, ನೀರು ಸೇರಿ ಇತರೆ ವವ್ಯಸ್ಥೆಯನ್ನು ಮಾಡಬೇಕು. ಆದರೆ, ರಾಜ್ಯ ಸರಕಾರ 5 ವರ್ಷಗಳಿಂದ ಬರಗಾಲ ಇರುವ ತಾಲೂಕಿನಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಿಲ್ಲ. ಇದರಿಂದ, ಸಾರ್ವಜನಿಕರ ಹಣ ಹಾಗೆಯೇ ಖರ್ಚಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ನ್ಯಾಯಪೀಠವು ರಾಜ್ಯದ ಎಲ್ಲ ತಾಲೂಕುಗಳಲ್ಲಿ ಗೋ ಶಾಲೆ ಸ್ಥಾಪಿಸಬೇಕು. ಜಾನುವಾರು ಶಿಬಿರಗಳಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಬೇಕೆಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು. ಅಲ್ಲದೆ, ಪ್ರಾಣಿ ಸಂರಕ್ಷಣಾ ಕಾಯ್ದೆ-1960 ಅನ್ನು ರಾಜ್ಯದಲ್ಲಿ ಜಾರಿಗೆ ತಂದು ಜಾನುವಾರುಗಳ ಸಂರಕ್ಷಣೆ ಮಾಡಬೇಕೆಂದು ರಾಜ್ಯ ಸರಕಾರಕ್ಕೆ ತಿಳಿಸಿತು.

ರಾಜ್ಯದಲ್ಲಿ 12 ವರ್ಷಗಳಿಂದ ಪ್ರಕೃತಿ ವಿಕೋಪ ಉಪಶಮನ ನಿಧಿ ಹಾಗೂ ಬರ ಪರಿಹಾರ ನಿರ್ವಹಣಾ ಸಮಿತಿ ರಚನೆ ಮಾಡಿಲ್ಲ ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News