ಅರ್ಜಿ ಸಲ್ಲಿಸಿದ ಅರ್ಹ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಅವಕಾಶ

Update: 2019-07-20 12:00 GMT

ಮಂಗಳೂರು, ಜು.20: ಈಗಾಗಲೇ ಜಿಲ್ಲೆಯಲ್ಲಿ ಹಾಸ್ಟೆಲ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಸೂಚಿಸಿ ಆದೇಶ ಹೊರಡಿಸಿದ್ದಾರೆ.

ನಗರದ ಬಾಲಕರ ವಿದ್ಯಾರ್ಥಿ ನಿಲಯ, ಕದ್ರಿ ಪದುವಾ ಹೈಸ್ಕೂಲ್ ಬಳಿ ವಿದ್ಯಾರ್ಥಿ ನಿಲಯ, ಉರ್ವಾ ಮಾರಿಗುಡಿ ಸಮೀಪದ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಕೋಡಿಯಾಲ್‌ಬೈಲ್‌ನ ವಿದ್ಯಾರ್ಥಿ ನಿಲಯಗಳಲ್ಲಿ ಪ್ರಸಕ್ತ ಸಾಲಿಗೆ ಒಟ್ಟು 137 ಮಂದಿ ಅರ್ಜಿ ಸಲ್ಲಿಸಿದ್ದರು.

ಆದರೆ, ಸರಕಾರ ಮೂಲಭೂತ ಸೌಕರ್ಯದ ಸಮಸ್ಯೆ ಮುಂದಿಟ್ಟು 2013ರ ಜುಲೈ 20ರ ಆದೇಶವನ್ನು ಮಾರ್ಪಡಿಸಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚು ಪ್ರವೇಶ ಈಡದಂತೆ 27-08-2017ರಂದು ಆದೇಶ ಹೊರಡಿಸಿತ್ತು. ಇದರಿಂದಾಗಿ ವಿದ್ಯಾರ್ಥಿ ನಿಲಯಗಳಲ್ಲಿ ಈಗಾಗಲೇ ಮಿತಿಗಿಂತ ಅಧಿಕ ವಿದ್ಯಾರ್ಥಿಗಳು ಇರುವುದರಿಂದ ಹೊಸತಾಗಿ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ಇಲ್ಲವಾಗಿತ್ತು. ಈ ಬಗ್ಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ ಸ್ಥಾಪಿತ) ದ.ಕ. ಜಿಲ್ಲಾ ಶಾಖೆಯ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ, ಸಮಾಜ ಕಲ್ಯಾಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಜತೆಗೆ ಪತ್ರಿಕಾಗೋಷ್ಠಿಯ ಮೂಲಕ ಗಮನ ಸೆಳೆದಿದ್ದರು.

ಇದೀಗ ಸಮಸ್ಯೆಯ ಗಂಭೀರತೆಯನ್ನು ಅರಿತು ಸರಕಾರವು ಹಿಂದಿನ ಆದೇಶವನ್ನು ವಾಪಾಸು ಪಡೆದು ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ನಿಲಯಗಳಲ್ಲಿ ಪ್ರವೇಶ ನೀಡುವಂತೆ ಜುಲೈ 17ರಂದು ಸಮಾಜ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯ ಪ್ರಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಕೋರಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೂ ಅವರು ಕೋರಿರುವ ವಿದ್ಯಾರ್ಥಿ ನಿಲಯಗಳಲ್ಲಿ ಅಥವಾ ಸಮೀಪದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಕಲ್ಪಿಸಬೇಕು. ಪ್ರವೇಶ ಪಡೆದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಂಡು ಅದಕ್ಕೆ ಅಗತ್ಯವಿರುವ ಅನುದಾನ, ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ಅನುಮೋದನೆ ಕೋರಿ ಪ್ರಸ್ತಾಪನೆ ಸಲ್ಲಿಸುವಂತೆ ತಿಳಿಸಲಾಗಿದೆ.

ಮನವಿಗೆ ಸ್ಪಂದಿಸಿ ಸೂಕ್ತ ಸುತ್ತೋಲೆ ಹೊರಡಿಸಿರುವ ಸರಕಾರದ ತೀರ್ಮಾನವನ್ನು ಸ್ವಾಗತಿಸಿರುವ ದಸಂಸ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News