ಸರಕಾರ ಉಳಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಮುಖಂಡರ ಕಸರತ್ತು

Update: 2019-07-20 15:55 GMT

ಬೆಂಗಳೂರು, ಜು.20: ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಸೋಮವಾರ ವಿಶ್ವಾಸಮತ ಯಾಚನೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ರೂಲಿಂಗ್ ನೀಡಿರುವ ಬೆನ್ನಲ್ಲೆ, ರಾಜ್ಯ ಸರಕಾರವನ್ನು ಉಳಿಸಿಕೊಳ್ಳಲು ಮಿತ್ರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಶನಿವಾರ ಸರಣಿ ಸಭೆಗಳನ್ನು ನಡೆಸುವ ಮೂಲಕ ತೀವ್ರ ಕಸರತ್ತು ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸ ಕಾವೇರಿ ಹಾಗೂ ತಾಜ್‌ವೆಸ್ಟೆಂಡ್ ಹೊಟೇಲ್‌ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಿರಂತರವಾಗಿ ಉಭಯ ಪಕ್ಷಗಳ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.

ಕುಮಾರಸ್ವಾಮಿ ಜೊತೆಗಿನ ಚರ್ಚೆ ಮುಗಿಸಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೊರಡಿದ ಬಳಿಕ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕುಮಾರಸ್ವಾಮಿ ಪ್ರತ್ಯೇಕವಾಗಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಚರ್ಚೆಯಲ್ಲಿ ಪರಮೇಶ್ವರ್, ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಝಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು. ಈ ವೇಳೆ ಅತೃಪ್ತ ಶಾಸಕರನ್ನು ಸಂಪರ್ಕಿಸುವ ಪ್ರಯತ್ನವು ನಡೆಯಿತು ಎಂದು ತಿಳಿದು ಬಂದಿದೆ.

ತಮ್ಮ ನಿವಾಸದಲ್ಲಿ ನಡೆದ ಚರ್ಚೆಯ ಬಳಿಕ ಸಿದ್ದರಾಮಯ್ಯ ತಾಜ್ ವಿವಾಂತ ಹೊಟೇಲ್‌ಗೆ ತೆರಳಿ, ಕಾಂಗ್ರೆಸ್ ಶಾಸಕರ ಜೊತೆ, ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆಯಲಿರುವ ಬೆಳವಣಿಗೆಗಳು ಹಾಗೂ ನಂತರದ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.

ನಾಗೇಂದ್ರರನ್ನು ಭೇಟಿಯಾದ ಝಮೀರ್: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅನಾರೋಗ್ಯದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದನಕ್ಕೆ ಗೈರು ಹಾಜರಾಗಿದ್ದಾರೆ. ಸೋಮವಾರ ವಿಶ್ವಾಸಮತ ಯಾಚನೆಯಾಗಲಿರುವ ಹಿನ್ನೆಲೆಯಲ್ಲಿ ಸದನಕ್ಕೆ ಬಂದು ಸರಕಾರದ ಪರವಾಗಿ ಮತ ಚಲಾಯಿಸುವಂತೆ ನಾಗೇಂದ್ರಗೆ ಝಮೀರ್ ಅಹ್ಮದ್ ಖಾನ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News