ಶೀಲಾ ದೀಕ್ಷಿತ್ ನಿಧನಕ್ಕೆ ರಾಜ್ಯ ರಾಜಕೀಯ ನಾಯಕರ ಸಂತಾಪ

Update: 2019-07-20 16:44 GMT

ಬೆಂಗಳೂರು, ಜು.20: ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ, ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ, ಬಿ.ಎಸ್ ಯಡಿಯೂರಪ್ಪ, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. 

ಶೀಲಾ ದೀಕ್ಷಿತ್‌ಮುಖ್ಯಮಂತ್ರಿಯಾಗಿದ್ದಾಗ ದೆಹಲಿಯ ಅಭಿವೃದ್ದಿಗೆ ಹೊಸ ಆಯಾಮ ನೀಡಿದರು. ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ನಿಧನದಿಂದ ಆಘಾತವಾಗಿದೆ. ಅವರ ಅಗಲಿಕೆ ಕಾಂಗ್ರೆಸ್‌ಗೆ ಮಾತ್ರವಲ್ಲ, ರಾಷ್ಟ್ರ ರಾಜಕಾರಣಕ್ಕೆ ತುಂಬಲಾರದ ನಷ್ಟ. ದೆಹಲಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನಡೆಸಿ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಶೀಲಾ ದೀಕ್ಷಿತ್ ಕುಟುಂಬದವರ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರಾಗಿ ಹಾಗೂ ದೆಹಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಶೀಲಾ ದೀಕ್ಷಿತ್, ಈ ದೇಶದ ಕಂಡ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. ಅವರು ದಕ್ಷ ಕಾರ್ಯನಿರ್ವಹಣೆಯ ಜೊತೆಗೆ ಸರಳ ಜೀವನಕ್ಕೆ ಹೆಸರಾಗಿದ್ದರು. ಗಟ್ಟಿತನದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದಿಟ್ಟ ಮಹಿಳೆ ಎನಿಸಿಕೊಂಡಿದ್ದರು. ಅವರ ನಿಧನದಿಂದ ಈ ದೇಶ ಒಬ್ಬ ಪ್ರಬುದ್ಧ, ಮುತ್ಸದ್ದಿ ರಾಜಕೀಯ ನಾಯಕಿಯನ್ನು ಕಳೆದುಕೊಂಡಂತಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ದೇಶ ಕಂಡ ಅಪ್ರತಿಮ ರಾಜಕಾರಣಿ. ದೆಹಲಿ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ ಶೀಲಾ ದೀಕ್ಷಿತ್ ನಿಧನದ ಸುದ್ದಿ ಅತೀವ ದುಃಖವನ್ನು ಉಂಟು ಮಾಡಿದೆ. ಅವರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಜಯಮಾಲಾ ಸಂತಾಪ ಸೂಚಿಸಿದ್ದಾರೆ.

ದೇಶದ ರಾಜಧಾನಿ ದೆಹಲಿಯ ಮುಖ್ಯಮಂತ್ರಿಯಾಗಿ ಮೂರು ಬಾರಿ ಆಯ್ಕೆಯಾಗಿದ್ದ ಅವರು ಮಹಿಳೆಯರಿಗೆ ಸ್ಫೂರ್ತಿ ತುಂಬಿದವರು. ಕಾಂಗ್ರೆಸ್‌ನ ರಾಜ್ಯಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ ರೀತಿ ಜನಪ್ರತಿನಿಧಿಗಳಿಗೆ ಮಾದರಿಯೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶೋಕಸಂತಾಪದಲ್ಲಿ ಅಭಿಪ್ರಾಯಿಸಿದ್ದಾರೆ.

ಡಿಕೆಶಿ ಸಂತಾಪ: ಮೂರು ಬಾರಿ ದೆಹಲಿ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿದ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಅವರು ಶನಿವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂಬ ಸುದ್ದಿ ಕೇಳಿ ಬೇಸರವಾಗಿದೆ. 1998ರಿಂದ 2013ರ ವರೆಗೂ ದೆಹಲಿಯಲ್ಲಿ ಸಮರ್ಥವಾಗಿ ಸರ್ಕಾರ ನಡೆಸಿ ಅತ್ಯುತ್ತಮ ಆಡಳಿತ ನೀಡಿದ ಖ್ಯಾತಿ ಶೀಲಾ ದೀಕ್ಷಿತ್ ಅವರದು. ಅವರ ನೇತೃತ್ವದಲ್ಲಿ ಕಾಂಗ್ರೆಸ್ ದೇಶದ ರಾಜಧಾನಿಯಲ್ಲಿ ಬಲಿಷ್ಠವಾಗಿ ಬೆಳೆದಿತ್ತು.

ದೆಹಲಿಯ ಅಭಿವೃದ್ಧಿಯಲ್ಲಿ ಇವರ ಕೊಡುಗೆ ಅಪಾರ. ಶೀಲಾ ದೀಕ್ಷಿತ್ ಅವರು ಕೇವಲ ಕಾಂಗ್ರೆಸ್ ಮಾತ್ರವಲ್ಲ ಇತರೆ ವಿರೋಧ ಪಕ್ಷಗಳ ಗೌರವಕ್ಕೂ ಪಾತ್ರರಾದ ಅಪರೂಪದ ಮಹಿಳಾ ರಾಜಕಾರಣಿ ಎಂದರೆ ತಪ್ಪಿಲ್ಲ. ಅವರ ಅಗಲಿಕೆ ಪಕ್ಷಕ್ಕೆ ದೊಡ್ಡ ನಷ್ಟ. ಅವರ ಸ್ಥಾನವನ್ನು ತುಂಬುವುದು ಕಷ್ಟ.

ಅವರ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಸಂತಾಪದ ನುಡಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News