50 ಹೊಸ ತಾಲೂಕುಗಳಿಗೆ ಮೂಲ ಸೌಕರ್ಯ ಕಲ್ಪಿಸದ ವಿಚಾರ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜು.21: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ 50 ತಾಲೂಕುಗಳಿಗೆ ಮೂಲಸೌಕರ್ಯ ಕಲ್ಪಿಸದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಬೀದರ್ ಜಿಲ್ಲೆ ಔರಾದ್ ತಾಲೂಕಿನ ಗುರುನಾಥ ವಡ್ಡೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ವಿ.ಶ್ರೀನಿವಾಸ್ ಅವರು, ರಾಜ್ಯದಲ್ಲಿ 50 ಹೊಸ ತಾಲೂಕುಗಳು ರಚನೆಯಾಗಿವೆ. ಆದರೆ, ಒಂದೂವರೆ ವರ್ಷ ಕಳೆದರೂ ಆ ತಾಲೂಕುಗಳಿಗೆ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಹೊಸದಾಗಿ ರಚನೆಯಾಗಿರುವ ತಾಲೂಕು ಕಚೇರಿಗಳು ಕಾರ್ಯಾರಂಭ ಮಾಡುತ್ತಿವೆ, ಆದರೆ ಮೂಲಸೌಕರ್ಯ ಕೊರತೆ ಇರುವುದರಿಂದ ಆಯಾ ತಾಲೂಕಿನ ಜನರು ಕಂದಾಯ ಕೆಲಸ ಕಾರ್ಯಗಳಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ 2018ರ ಡಿ.31ರಂದು ಅರ್ಜಿದಾರರು ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಸಹ ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ನ್ಯಾಯಪೀಠಕ್ಕೆ ವಿವರಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿತು. ಹಾಗೂ ಹೊಸ ತಾಲೂಕುಗಳಿಗೆ ಎಷ್ಟು ದಿನದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಕುರಿತು ತಿಳಿಸಿ ಎಂದು ಹೇಳಿದರು.