ರೌಡಿಶೀಟರ್ ಅನಿಲ್‌ ಕುಮಾರ್‌ಗೆ ಗುಂಡೇಟು

Update: 2019-07-22 13:41 GMT

ಬೆಂಗಳೂರು, ಜು.22: ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಮೇಲೆ ಪೊಲೀಸರು ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸಿರುವ ಘಟನೆ ಇಲ್ಲಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಟನ್‌ಪೇಟೆ ರೌಡಿಶೀಟರ್ ಅನಿಲ್‌ಕುಮರ್(32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಮರಾಜಪೇಟೆ ಸಬ್ ಇನ್‌ಸ್ಪೆಕ್ಟರ್ ಕುಮಾರಸ್ವಾಮಿ ಅವರು ರವಿವಾರ ತಡರಾತ್ರಿ ಕಾಟನ್‌ಪೇಟೆಯ ವೆಟರ್ನರಿ ಹಾಸ್ಪಿಟಲ್ ಹಿಂಭಾಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪೇದೆ ಹಾಗೂ ರೌಡಿಶೀಟರ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಅನಿಲ್‌ಕುಮಾರ್ ವಿರುದ್ಧ ಕಾಟನ್‌ಪೇಟೆ, ಚಾಮರಾಜಪೇಟೆ, ಕೆ.ಆರ್. ಮಾರ್ಕೆಟ್, ಕೋರಮಂಗಲ, ಕೆ.ಜಿ.ಹಳ್ಳಿ ಸೇರಿದಂತೆ ವಿವಿಧ ಠಾಣೆಗಳಲ್ಲಿ 14 ಪ್ರಕರಣಗಳು ದಾಖಲಾಗಿವೆ. ಕಳೆದ ತಿಂಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ. ಆ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಹಿನ್ನೆಲೆಯಲ್ಲಿ ಆರೋಪಿ ಅನಿಲ್‌ಕುಮಾರ್ ಇರುವ ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯಲು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಆರೋಪಿ ಶರಣಾಗದೆ ಪೋಲಿಸರ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಆತ್ಮರಕ್ಷಣೆಗಾಗಿ ಸಬ್‌ಇನ್‌ಸ್ಪೆಕ್ಟರ್ ತಮ್ಮ ಬಳಿಯಿದ್ದ ಪಿಸ್ತೂಲ್ ನಿಂದ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಪೇದೆ ಚಂದ್ರಶೇಖರ್ ಪಾಟೀಲ್ ಎಂಬುವವರ ಎಡಭುಜಕ್ಕೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಪೇದೆ ಹಾಗೂ ಆರೋಪಿ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News