ಎಸ್ಸಿ-ಎಸ್ಟಿ ಉಪಯೋಜನೆ ಹಣ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

Update: 2019-07-24 15:29 GMT

ಬೆಂಗಳೂರು, ಜು.24: ಎಸ್ಸಿ-ಎಸ್ಟಿ ಉಪಯೋಜನೆ ಹಣವನ್ನು ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜು.25ರಂದು ನಗರವು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ದಲಿತ ಹಕ್ಕುಗಳ ಸಮಿತಿ ಮುಂದಾಗಿದೆ.

ಬುಧವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅರಳಹಳ್ಳಿ ನಾಗರಾಜ್, ರಾಜ್ಯಾದ್ಯಂತ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ಮಂಜೂರಾತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ-ಧರಣಿ ನಡೆಸುವ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗೆ ಅರ್ಜಿ ಸಲ್ಲಿಸಿದ ಎಲ್ಲ ಎಸ್ಸಿ-ಎಸ್ಟಿ ಸಮುದಾಯಕ್ಕೆ ಮಂಜೂರಾತಿ ನೀಡಬೇಕು. ಈ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಇಪಿ, ಟಿಎಸ್‌ಪಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಈ ಸಮುದಾಯದ ಅಭಿವೃದ್ಧಿಗೆ ಪ್ರತಿವರ್ಷ ಕೋಟ್ಯಂತರ ರೂ. ಬಜೆಟ್‌ನಲ್ಲಿ ಘೋಷಣೆ ಮಾಡಲಾಗುತ್ತದೆ. ಆದರೆ, ಈ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿದೆಯೇ, ಇಲ್ಲವೇ, ಎಷ್ಟು ಮಂದಿಗೆ ಇದರಿಂದ ಅನುಕೂಲವಾಗಿದೆ ಎನ್ನುವುದನ್ನು ಪರಾಮರ್ಶಿಸುವ ಸ್ಥಿತಿಗೆ ಹೋಗುವುದಿಲ್ಲ. ಹೀಗಾಗಿಯೇ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ ಎಂದು ವಿಷಾದಿಸಿದರು.

ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಾಗಿ ಪ್ರತಿವರ್ಷ ಸಾವಿರಾರು ಅರ್ಜಿಗಳನ್ನು ಸಲ್ಲಿಸಿದ್ದರೂ, ಶಾಸಕರ ನೇತೃತ್ವದ ಸಮಿತಿ ಸಮುದಾಯದ ಎಲ್ಲ ಅರ್ಹರಿಗೂ ವಿತರಿಸದೆ ರಾಜಕೀಯ ಬೆಂಬಲವಿರುವವರಿಗೆ ಮಾತ್ರ ವಿತರಿಸಲಾಗುತ್ತಿದೆ. ಇದರಿಂದ ಅರ್ಹರು ಸೌಲಭ್ಯದಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಭೂಮಿಯಿಲ್ಲದ ಎಸ್ಸಿ-ಎಸ್ಟಿ ಸಮುದಾಯದವರು ಈ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಧರಣಿ ಹೋರಾಟ ನಡೆಸುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News