ವಿಪಕ್ಷ ನಾಯಕ-ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಡಿಕೆಶಿ-ಪರಂ ಕಣ್ಣು ?

Update: 2019-07-24 16:32 GMT

ಬೆಂಗಳೂರು, ಜು.24: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಆಡಳಿತ ಅಂತ್ಯಗೊಳ್ಳುತ್ತಿದ್ದಂತೆ, ಇದೀಗ ವಿರೋಧ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿರುವ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸದಾಶಿವನಗರ ದಲ್ಲಿರುವ ತಮ್ಮ ನಿವಾಸಗಳಲ್ಲಿ ಪಕ್ಷದ ಮುಖಂಡರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೆ.ಆರ್.ಪುರ, ಯಶವಂತಪುರ, ರಾಜರಾಜೇಶ್ವರಿ ನಗರ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಮುಖಂಡರ ಜೊತೆ ಶಿವಕುಮಾರ್ ತಡರಾತ್ರಿಯವರೆಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಈ ನಾಲ್ಕು ಕ್ಷೇತ್ರಗಳ ಶಾಸಕರು ರಾಜೀನಾಮೆ ನೀಡಿ, ಮುಂಬೈನಲ್ಲಿ ಕೂತಿದ್ದಾರೆ. ಇವರ ಅಸಹಕಾರದಿಂದ ಸರಕಾರ ಪತನವಾಗಿದೆ ಎಂದು ಮುಖಂಡರ ಎದುರು ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

ಯಾವಾಗ ಬೇಕಾದರೂ ಈ ಕ್ಷೇತ್ರಗಳಿಗೆ ಚುನಾವಣೆ ಎದುರಾಗಬಹುದು. ಆದುದರಿಂದ, ನೀವೆಲ್ಲರೂ ಈಗಿನಿಂದಲೇ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕೆ.ಆರ್.ಪುರ, ಯಶವಂತಪುರ, ರಾಜರಾಜೇಶ್ವರಿ ನಗರ ಹಾಗೂ ಹೊಸಕೋಟೆ ಕ್ಷೇತ್ರಗಳ ಉಸ್ತುವಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ. ಈ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಒಂದು ತಿಂಗಳ ಬಳಿಕ ನಾನೇ ಈ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ. ಸ್ಥಳೀಯ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರೋಣ ಎಂದು ಮುಖಂಡರಿಗೆ ಶಿವಕುಮಾರ್ ಕರೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪ್ರಮುಖವಾಗಿ ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಎದುರು ಪೈಪೋಟಿ ಎದುರಾಗಿದೆ ಎಂದು ತಿಳಿದು ಬಂದಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೂ ಕೆಲವೇ ತಿಂಗಳಲ್ಲಿ ಗಂಡಾಂತರ ಎದುರಾಗಬಹುದು. ಅಲ್ಲದೆ, ಮಧ್ಯಂತರ ಚುನಾವಣೆಯನ್ನು ಘೋಷಿಸಿ ಮತ್ತೆ ಚುನಾವಣೆಗೆ ಹೋಗುವ ಸಾಧ್ಯತೆಗಳಿವೆ.

ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಸಾರಥ್ಯ ವಹಿಸಿಕೊಂಡವರು, ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿ ಹುದ್ದೆಯ ಪ್ರಥಮ ಆಯ್ಕೆಯಾಗಿರುತ್ತಾರೆ. ಆದುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಇಬ್ಬರು ನಾಯಕರು ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಈ ಇಬ್ಬರು ಮುಖಂಡರ ಪ್ರಯತ್ನದ ನಡುವೆಯೇ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಕೂಡ ಹಿರಿತನ ಹಾಗೂ ಅನುಭವದ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ದಕ್ಕಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News