ಹೈಕಮಾಂಡ್ ಸೂಚನೆಗಾಗಿ ಕಾಯುತ್ತಿದ್ದೇವೆ: ಶ್ರೀರಾಮುಲು

Update: 2019-07-25 12:44 GMT

ಬೆಂಗಳೂರು, ಜು.25: ದೆಹಲಿಯಲ್ಲಿರುವ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಸ್ವೀಕರಿಸಲಿದ್ದಾರೆ. ನಂತರ ಸಚಿವ ಸ್ಥಾನದ ಆಯ್ಕೆಯನ್ನು ಹೈಕಮಾಂಡ್‌ನೊಂದಿಗೆ ಮಾತುಕತೆ ನಡೆಸಿ ತೀರ್ಮಾನಿಸಲಾಗುತ್ತದೆ. ಇದರಲ್ಲಿ ಯಾವುದೆ ಗೊಂದಲವಿಲ್ಲವೆಂದು ಸ್ಪಷ್ಟಪಡಿಸಿದರು.

ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶೆಯಿಂದ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಹೇಳುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲ್ಲ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಜನಪರವಾಗಿ ಆಡಳಿತ ನಡೆಸಲಿದೆ ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಹುದ್ದೆಯ ಕುರಿತು ಮಾತನಾಡಿದ ಅವರು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ನಾನು ವೈಯಕ್ತಿಕವಾಗಿ ಯಾವ ಸ್ಥಾನಕ್ಕೂ ಆಸೆ ಪಡುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆಯಂತೆ ನಡೆದುಕೊಳ್ಳುತ್ತೇನೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News