ಮಳೆಹಾನಿ ಕುರಿತು ನಿಗಾ ವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ

Update: 2019-07-25 18:21 GMT

ಮಡಿಕೇರಿ, ಜು.25: ಪ್ರಕೃತಿ ವಿಕೋಪ ನಿರ್ವಹಣೆ ಸಂಬಂಧ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಮತ್ತಷ್ಟು ನಿಗಾ ವಹಿಸಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಸಂಬಂಧಿಸಿದ ಜಿಲ್ಲಾಮಟ್ಟದ ಹಾಗೂ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆ ಬಿರುಸುಗೊಂಡಿದ್ದು, ಈ ಸಮಯದಲ್ಲಿ ಅಧಿಕಾರಿಗಳು ತೃಪ್ತಿಕರವಾಗಿ ಕಾರ್ಯನಿರ್ವಹಿಸಿದ್ದು, ಮುಂದೆಯೂ ಇದೇ ರೀತಿಯಾಗಿ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಪರಿಹಾರ ಕೇಂದ್ರಗಳ ಸ್ಥಾಪನೆ ಹಾಗೂ ಅಗತ್ಯದ ಬಗ್ಗೆ ಡಿಸಿ ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಪರಿಹಾರ ಕೇಂದ್ರ ತೆರೆದಿರುವುದಿಲ್ಲ. ಅಗತ್ಯವಿದ್ದ ಸಂದರ್ಭದಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗುವುದು. ಹಾಗೂ ಈ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿರುವುದಾಗಿ ಸಭೆಗೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಾಗೂ ಸಂಪಾಜೆ ವ್ಯಾಪ್ತಿಯ ನೋಡಲ್ ಅಧಿಕಾರಿ ಮಚ್ಚಾಡೋ ಸಂಪಾಜೆ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ ಸಮಸ್ಯೆ ಇದ್ದು, ತುರ್ತು ಸಂದರ್ಭದಲ್ಲಿ ಇದರಿಂದ ತುಂಬಾ ಅನನುಕೂಲವಾಗಲಿದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು ಮಾತನಾಡಿ, ರಸ್ತೆಯ ಇಕ್ಕೆಲಗಳಲ್ಲಿ ಇರುವಂತಹ ಚರಂಡಿಯಲ್ಲಿನ ಮಣ್ಣನ್ನು ತೆರವುಗೊಳಿಸಿ ಸರಾಗವಾಗಿ ನೀರು ಹೋಗುವಂತೆ ಕ್ರಮಕೈಗೊಳ್ಳಲು ಮುಂದಾಗಬೇಕಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಆರೋಗ್ಯ ಸಂಬಂಧಿಸಿದಂತೆ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ತುರ್ತು ಸಂದರ್ಭಕ್ಕೆ 24್ಡ7 ಸಹಾಯವಾಣಿ 08272-220606 ತೆರೆಯಲಾಗಿದೆ. 8 ಹಾಸಿಗೆಯ ತುರ್ತು ನಿಗಾ ಘಟಕ ಪ್ರಾರಂಭಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಎಸ್ಪಿ ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಈಗಾಗಲೇ ಪ್ರಕೃತಿ ವಿಕೋಪ ನಿರ್ವಹಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ತಂಡವು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸಾರ್ವಜನಿಕರಲ್ಲಿ ಉತ್ತಮ ಸಂದೇಶ ನೀಡಿದ್ದು, ಮದೆನಾಡಿನಲ್ಲಿ ಇತ್ತೀಚೆಗೆ ಬರೆ ಕುಸಿತ, ವಿದ್ಯುತ್ ಕಂಬಗಳು ಉರುಳಿದ ಸಂದರ್ಭದಲ್ಲಿ ಅಧಿಕಾರಿಗಳ ಕಾರ್ಯ ನಿರ್ವಹಣೆಯನ್ನು ಶ್ಲಾಘಿಸಿದರು.
ಜಿಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿ್ಲಾಧಿಕಾರಿ ಡಾ.ಸ್ನೇಹಾ ಮಾತನಾಡಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಇತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News