ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಇಲ್ಲ: ಬಿ.ಎಸ್.ಯಡಿಯೂರಪ್ಪ

Update: 2019-07-29 16:27 GMT

ಬೆಂಗಳೂರು, ಜು.29: ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಕರ್ನಾಟಕ ಧನವಿನಿಯೋಗ ವಿಧೇಯಕ-2019ನ್ನು ಅಂಗೀಕರಿಸಲಾಯಿತು. ವಿಧೇಯಕದ ಮೇಲೆ ಮಾತನಾಡಿದ ಕಾಂಗ್ರೆಸ್ ಹಿರಿಯ ಸದಸ್ಯ ಎಸ್.ಆರ್.ಪಾಟೀಲ್ ಅವರು, ಧನವಿನಿಯೋಗವನ್ನು ಅಂಗೀಕರಿಸುತ್ತೇವೆ. ಆದರೆ, ಸರಕಾರದ ಅಭಿವೃದ್ಧಿ ವಿಷಯದಲ್ಲಿ ನಾವು ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ. ಉತ್ತರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷವಾದ ಯೋಜನೆಗಳನ್ನು ರೂಪಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು. 

ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಎಂಬಂತೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಬೇಡ. ನೀವು ಏನೇ ಜನಪರ ಕೆಲಸ ಮಾಡಿದರೂ ಅದಕ್ಕೆ ಸಂಪೂರ್ಣ ಸಹಕಾರವಿದೆ. ಕರ್ನಾಟಕ ಅಭಿವೃದ್ದಿ ವಿಷಯದಲ್ಲಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ನೀವು ಹೈದರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಡಬೇಕು. ನಿಮ್ಮೊಂದಿಗೆ ನಾವು ಕೈ ಜೋಡಿಸುತ್ತೇವೆ ಎಂದು ಹೇಳಿದರು.

ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ನೀವು ಎಷ್ಟೋ ಹೋರಾಟ ಮಾಡಿದ್ದೀರಿ ಎಂಬುದು ನನಗೆ ಗೊತ್ತು. ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಸಂಸದರಾಗಿ, ವಿರೋಧ ಪಕ್ಷದ ನಾಯಕರಾಗಿ ಹೀಗೆ ಅನೇಕ ಹುದ್ದೆಗಳನ್ನು ಅನುಭವಿಸಿದ್ದೀರಿ. ನಿಮಗೆ ಈ ಸದನ ಎಲ್ಲ ರೀತಿಯಲ್ಲೂ ಸಹಕಾರ ನೀಡುತ್ತದೆ. ಹಾಗೂ ಧನವಿನಿಯೋಗಕ್ಕೆ ನಾವು ಸಂಪೂರ್ಣವಾಗಿ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಸದಸ್ಯರು ಮಾತನಾಡಿದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ನಾನು ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುವುದಿಲ್ಲ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ನನಗಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು. ಧನವಿನಿಯೋಗವನ್ನು ಸದಸ್ಯರೆಲ್ಲರೂ ಸರ್ವಾನುಮತದಿಂದ ಅಂಗೀಕರಿಸಬೇಕೆಂದು ಯಡಿಯೂರಪ್ಪ ಮನವಿ ಮಾಡಿದರು. ಬಳಿಕ ಸಭಾಧ್ಯಕ್ಷರಾದ ಪ್ರತಾಪ್ ಚಂದ್ರಶೆಟ್ಟಿ ಅವರು ಧ್ವನಿ ಮತದ ಮೂಲಕ ಅಂಗೀಕೃತವಾದ ಕರ್ನಾಟಕ ಧನವಿನಿಯೋಗ ಲೇಖಾನುದಾನ-2019ನ್ನು ಧ್ವನಿಮತದ ಮೂಲಕ ಅಂಗೀಕರಿಸಿದರು. 

ಆ.2ರಂದು ಡಿಸಿಗಳ ಸಭೆ

ಆ.2ರಂದು ಜಿಲ್ಲಾಧಿಕಾರಿಗಳ ಸಭೆ ಕರೆಯಲಾಗಿದೆ. ಅಂದು ದಿನ ಪೂರ್ತಿ ಚರ್ಚಿಸಿ ಬರಗಾಲದ ಸಮಸ್ಯೆಯನ್ನು ಯಾವ ರೀತಿ ಎದುರಿಸಬೇಕೆಂಬುದರ ಬಗ್ಗೆ ಪರಿಹಾರ ಕಂಡುಕೊಳ್ಳಲಾಗುವುದು. ರೈತರು ಆತಂಕಗೊಳ್ಳುವ ಅಗತ್ಯವಿಲ್ಲ. ಕೇಂದ್ರದ ಯೋಜನೆಗಳ ಮೂಲಕ ರಾಜ್ಯವನ್ನು ಅಭಿವೃದ್ಧಿಪಡಿಸೋಣ. ನನಗೆ ಪಕ್ಷ ರಾಜಕಾರಣದಲ್ಲಿ ನಂಬಿಕೆ ಇಲ್ಲ. ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಮಾದರಿ ಮಾಡುವುದು ನನ್ನ ಪ್ರಮುಖ ಉದ್ದೇಶಗಳಲ್ಲಿ ಒಂದು.’

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News