ಡಿಸಿಎಂ ಹುದ್ದೆಗೆ ಹಿರಿಯ ನಾಯಕರ ನಡುವೆ ಪೈಪೋಟಿ

Update: 2019-07-29 17:51 GMT

ಬೆಂಗಳೂರು, ಜು.29: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದರ ಜೊತೆಗೆ ಉಪ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳಲು ಹಿರಿಯ ನಾಯಕರ ನಡುವೆ ಪೈಪೋಟಿ ಎದುರಾಗಿದೆ.

ಈ ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಎರಡು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಜಿಸಿ ಒಕ್ಕಲಿಗ ಸಮುದಾಯದ ಆರ್.ಅಶೋಕ್ ಹಾಗೂ ಕುರುಬ ಸಮುದಾಯದ ಕೆ.ಎಸ್.ಈಶ್ವರಪ್ಪಗೆ ಮನ್ನಣೆ ನೀಡಲಾಗಿತ್ತು.

ಇದೀಗ, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ ಜೊತೆಗೆ ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಹೆಸರು ಉಪ ಮುಖ್ಯಮಂತ್ರಿ ಹುದ್ದೆಗೆ ಪ್ರಬಲವಾಗಿ ಕೇಳಿ ಬರುತ್ತಿದೆ. ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಗೆಲ್ಲಲು ವಾಲ್ಮೀಕಿ ಸಮುದಾಯದ ಬೆಂಬಲವೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ, ಶ್ರೀರಾಮುಲುಗೆ ಉಪ ಮುಖ್ಯಮಂತ್ರಿ ಹುದ್ದೆ ಕೊಡುವ ಭರವಸೆಯನ್ನು ಬಿಜೆಪಿ ನಾಯಕರು ನೀಡಿದ್ದರು ಎನ್ನಲಾಗಿದೆ. ಇದರ ಜೊತೆಗೆ ಅರವಿಂದ ಲಿಂಬಾವಳಿ ಹೆಸರು ಕೇಳಿ ಬಂದಿದೆ. ಆದರೆ, ಶ್ರೀರಾಮುಲುಗೆ ಅದೃಷ್ಟ ಒಲಿಯುವ ಸಾಧ್ಯತೆಗಳಿವೆ.

ಸಂಪುಟ: ಜೆ.ಸಿ.ಮಾಧುಸ್ವಾಮಿ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಡಾ.ಸಿ.ಎನ್.ಅಶ್ವಥ್‌ನಾರಾಯಣ, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ, ಪಕ್ಷೇತರ ಶಾಸಕ ನಾಗೇಶ್ ಸಚಿವರಾಗುವುದು ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ. ಆಗಸ್ಟ್ 2 ಅಥವಾ 5ರಂದು ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಸಂಬಂಧ ಚರ್ಚೆ ನಡೆಸಲು ಶೀಘ್ರವೇ ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿಗೆ ತೆರಳಿ, ಪಕ್ಷದ ವರಿಷ್ಠರ ಜೊತೆ ಚರ್ಚಿಸಿ, ಸಂಪುಟ ವಿಸ್ತರಣೆ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News