ನೂತನ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

Update: 2019-07-30 14:45 GMT

ಬೆಂಗಳೂರು, ಜು. 30: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಜು.30ರ ಮಧ್ಯಾಹ್ನದ ವರೆಗೂ ಅವಕಾಶವಿತ್ತು. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಹೊರತುಪಡಿಸಿ ವಿಪಕ್ಷ ಕಾಂಗ್ರೆಸ್-ಜೆಡಿಎಸ್‌ನಿಂದ ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಆ ಹಿನ್ನೆಲೆಯಲ್ಲಿ ಕಾಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಳೆ(ಜು.31) ಬುಧವಾರ ನಡೆಯಲಿರುವ ವಿಧಾನಸಭೆ ಕಲಾಪದಲ್ಲಿ ವಿಧಾನಸಭೆಯ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ಅವರು ಅಧಿಕೃತವಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಆಗಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಕಾಗೇರಿ ಸಂತಸ: ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಂತಸ ತಂದಿದೆ. ಪಕ್ಷದ ವರಿಷ್ಠರು, ರಾಜ್ಯದ ನಾಯಕರು ಎಲ್ಲರೂ ಸೆೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದು, ಸ್ಪೀಕರ್ ಹುದ್ದೆ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಇದೇ ವೇಳೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ ಪಕ್ಷದ ನಿಷ್ಠಾವಂತ ಸೇವಕ. ಇಂತಹ ಸ್ವಯಂ ಸೇವಕ ಈಗ ಸ್ಪೀಕರ್ ಅಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಇದೇ ವೇಳೆ ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸುರೇಶ್ ಕುಮಾರ್, ಮಾಜಿ ಡಿಸಿಎಂ ಆರ್. ಅಶೋಕ್, ಗೋವಿಂದ ಕಾರಜೋಳ ಸೇರಿದಂತೆ ಇನ್ನಿತರ ಮುಖಂಡರು, ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News