8.93 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಕ್ರಮ: ಜಿ.ಎ.ಬಾವಾ

Update: 2019-08-01 12:35 GMT

ಬೆಂಗಳೂರು, ಆ.1: 2018-19ನೇ ಸಾಲಿನ ಆರ್ಥಿಕ ವರ್ಷದಲ್ಲಿ ವಿದ್ಯಾರ್ಥಿವೇತನ ಪಡೆಯುವಲ್ಲಿ ವಿಫಲವಾಗಿರುವ 8.93 ಲಕ್ಷ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವಾ ತಿಳಿಸಿದರು.

ಗುರುವಾರ ನಗರದ ವಿಶ್ವೇಶ್ವರಯ್ಯ ಗೋಪುರದಲ್ಲಿರುವ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2018-19ನೆ ಸಾಲಿನಲ್ಲಿ ರಾಜ್ಯದ 14.47 ಲಕ್ಷ ವಿದ್ಯಾರ್ಥಿಗಳು, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಕೇಂದ್ರ ಸರಕಾರಕ್ಕೆ ಅರ್ಜಿ ಸಲ್ಲಿಸಿದ್ದರು ಎಂದರು.

ಈ ಪೈಕಿ 4.84 ಲಕ್ಷ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ವಿದ್ಯಾರ್ಥಿವೇತನ ಮಂಜೂರು ಮಾಡಿದೆ. ಉಳಿದ 8.93 ಲಕ್ಷ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರವು ತನ್ನ ಪಾಲಿನಿಂದ ವಿದ್ಯಾರ್ಥಿವೇತನ ನೀಡಬೇಕಿದೆ. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದಾಗಿ ಈ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿಸಲು ಸಾಧ್ಯವಾಗಿರಲಿಲ್ಲ ಎಂದು ಅವರು ಹೇಳಿದರು.

ಕಳೆದ ಮಾರ್ಚ್‌ನಲ್ಲಿಯೇ ವಿದ್ಯಾರ್ಥಿವೇತನ ಪಾವತಿಯಾಗಬೇಕಿತ್ತು. ಆದರೆ, ಕೇಂದ್ರ ಸರಕಾರದಿಂದ ವಿದ್ಯಾರ್ಥಿವೇತನ ವಂಚಿತರಾಗಿರುವ ವಿದ್ಯಾರ್ಥಿಗಳ ಮಾಹಿತಿ ನಮಗೆ ಸಿಕ್ಕಿರಲಿಲ್ಲ. ಈ ಸಂಬಂಧ ಜು.28 ಹಾಗೂ 29ರಂದು ಹೊಸದಿಲ್ಲಿಯಲ್ಲಿದ್ದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು ಎಂದು ಜಿ.ಎ.ಬಾವಾ ತಿಳಿಸಿದರು.

ಈಗಾಗಲೇ 2019-20ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆದುದರಿಂದ, ಕಳೆದ ಸಾಲಿನ ವಿದ್ಯಾರ್ಥಿವೇತನ ವಂಚಿತ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತ್ರ ಈ ರೀತಿ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮ ಜಾರಿಯಲ್ಲಿದೆ ಎಂದು ಅವರು ಹೇಳಿದರು.

ಪ್ರಸಕ್ತ ಸಾಲಿನ ಜನವರಿ ತಿಂಗಳಿನಿಂದಲೇ ಕೇಂದ್ರ ಸರಕಾರದ ಜೊತೆ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿಯಾಗಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಪತ್ರ ವ್ಯವಹಾರಗಳನ್ನು ನಡೆಸಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ನಮ್ಮ ಸಮಸ್ಯೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ನೆರವು ನೀಡಿದರು ಎಂದು ಅವರು ಹೇಳಿದರು.

8.93 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿಸಲು 200 ಕೋಟಿ ರೂ.ಗಳು ರಾಜ್ಯ ಸರಕಾರದ ಬಳಿ ಲಭ್ಯವಿದೆ. ಇನ್ನೊಂದು ವಾರದಲ್ಲಿ ವಿದ್ಯಾರ್ಥಿವೇತನ ವಂಚಿತ ವಿದ್ಯಾರ್ಥಿಗಳ ಮಾಹಿತಿ ನಮ್ಮ ಕೈ ಸೇರಲಿದ್ದು, ಆನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಾವಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಅನೀಸ್ ಸಿರಾಜ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News