ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

Update: 2019-08-01 15:44 GMT

ಬೆಂಗಳೂರು, ಆ. 1: ‘ರಾಜ್ಯದಲ್ಲಿ ಕೋಮುಗಲಭೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತು ಚರ್ಚಿಸಿದ ಅವರು, ಎಲ್ಲ ಧರ್ಮದವರ ಹಬ್ಬಗಳ ಆಚರಣೆಗೆ ಅಡ್ಡಿ ಆತಂಕಗಳಿಲ್ಲದ ವಾತಾವರಣ ನಿರ್ಮಿಸಬೇಕು. ಹಬ್ಬ-ಹರಿದಿನಗಳಂದು ವಿಶೇಷ ಭದ್ರತೆ ನೀಡಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ನಿದೇಶರ್ನ ನೀಡಿದರು.

ವಂಚನೆ ಪ್ರಕರಣಗಳ ತಡೆಗಟ್ಟಿ: ರಾಜ್ಯದಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ಇವುಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಯಡಿಯೂರಪ್ಪ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯಾನನಗರಿ ಬೆಂಗಳೂರಿನ ಬಗ್ಗೆ ಇಡೀ ಜಗತ್ತು ಗಮನಹರಿಸುತ್ತದೆ. ನಗರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಸೂಕ್ತ ನಿಗಾ ವಹಿಸಬೇಕು. ವಿಶ್ವಮಟ್ಟದ ತಂತ್ರಜ್ಞಾನ ಬಳಸಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು ಎಂದು ನಿರ್ದೇಶನ ನೀಡಿದರು.

ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುವಂತೆ ಕ್ರಮ ವಹಿಸಬೇಕು ಎಂದ ಅವರು, ಬೆಂಗಳೂರಿನಲ್ಲಿ ಭಯೋತ್ಪಾದಕರು ಆಶ್ರಯ ಪಡೆದಿರುವ ಬಗ್ಗೆ ಎಚ್ಚರ ವಹಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲು ಸೂಚನೆ ನೀಡಿದರು.

ಇಲಾಖೆಯಲ್ಲಿ ಖಾಲಿ ಇರುವ 25,174 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುವುದು. ನಿರ್ಮಾಣ ಹಂತದಲ್ಲಿರುವ ಪೊಲೀಸರ ವಸತಿ ಗೃಹಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ಪೊಲೀಸ್ ಕಚೇರಿಗಳ ನಿರ್ಮಾಣ ಕಾಮಗಾರಿಗಳು ವಿಳಂಬವಾಗಬಾರದು ಎಂದರು.

ಪೊಲೀಸ್ ಇಲಾಖೆ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾವಾರು ಪಟ್ಟಿ ಸಲ್ಲಿಸಲು ಸೂಚಿಸಿದರು. ಅಧಿಕಾರಿ ಮತ್ತು ಸಿಬ್ಬಂದಿಗಳ ಕಲ್ಯಾಣ ಕಾರ್ಯಕ್ರಮಗಳಿಗೆ ಸರಕಾರ ಆದ್ಯತೆ ನೀಡುವುದು ಎಂದು ಅವರು ಇದೆೀ ಸಂದರ್ಭದಲ್ಲಿ ಭರವಸೆಯಿತ್ತರು.

ಇಲಾಖೆ ವಿವಿಧ ಕಾರ್ಯಕ್ರಮಗಳಿಗೆ ಅಗತ್ಯವಿರುವ ಅನುದಾನವನ್ನು ಹಣಕಾಸಿನ ಸ್ಥಿತಿಗತಿ ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. ಸಭೆಯಲ್ಲಿ ಸಿಎಂ ಸಲಹೆಗಾರ ಎಂ.ಲಕ್ಷ್ಮಿನಾರಾಯಣ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು, ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News