‘ಜನಶಕ್ತಿ ಬೆಳೆಸುವ ಚಿಂತನೆ ಮಾಧ್ಯಮಗಳಿಂದಾಗಲಿ’

Update: 2019-08-04 16:44 GMT

ಬ್ರಹ್ಮಾವರ, ಆ.4: ಮಾಧ್ಯಮಗಳ ಮೂಲಕ ಜನಶಕ್ತಿ ಬೆಳೆಸುವ ಚಿಂತನೆ ನಡೆಯಬೇಕು. ಇಂದು ಸತ್ಯದ ಪರ ಹಾಗೂ ಅನ್ಯಾಯದ ವಿರುದ್ಧ ಮಾಧ್ಯಮಗಳು ಸೆಟೆದು ನಿಲ್ಲಬೇಕಾದ ಅಗತ್ಯವಿದೆ ಎಂದು ಮುಂಬೈಯ ‘ಕರ್ನಾಟಕ ಮಲ್ಲ’ ಪತ್ರಿಕೆಯ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಹೇಳಿದ್ದಾರೆ.

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನೀಡಲಾದ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ಯನ್ನು ಬ್ರಹ್ಮಾವರದ ಬಂಟರ ಭವನದಲ್ಲಿ ರವಿವಾರ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಈ ನಿಟ್ಟಿನಲ್ಲಿ ಮುಂಗಾರು ಪತ್ರಿಕೆ ಸಂಪಾದಕರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಚಿಂತನೆ, ಆದರ್ಶ ಇಂದಿಗೂ ಪ್ರಸ್ತುತ ಎಂದ ಅವರು ವಡ್ಡರ್ಸೆ ಅವರೊಂದಿಗಿನ ತವ್ಮು ಒಡನಾಟವನ್ನು ಸ್ಮರಿಸಿಕೊಂಡರು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿ, ಸಮಾಜವನ್ನು ಕಟ್ಟುವ ಕೆಲಸ ಮಾಧ್ಯಮಗಳಿಂದ ಆಗಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಮಾಜಿಕ ಹೋರಾಟಗಾರ ಡಾ.ರವೀಂದ್ರನಾಥ ಶ್ಯಾನುಭಾಗ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಪತ್ರಿಕೆಗಳು ಜನರಿಗೆ ಒಳಿತನ್ನು ನೀಡುವ, ಧ್ವನಿ ಇಲ್ಲದವರ ಧ್ವನಿಯಾಗಿ, ಜನರ ಅಗತ್ಯತೆಗಳನ್ನು ಪೂರೈುವ ಕೆಲಸ ಮಾಡಬೇಕು ಎಂದರು.

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಖ್ಯಾತ ವ್ಯಂಗ್ಯ ಚಿತ್ರಕಾರ ಪತ್ರಕರ್ತ ಪಂಜು ಗಂಗೊಳ್ಳಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಉದ್ಯಮಿ ಗಳಾದ ಗುರ್ಮೆ ಸುರೇಶ್ ಶೆಟ್ಟಿ, ಮುಂಬೈಯ ಮರಾಠ ಸುರೇಶ್ ಶೆಟ್ಟಿ, ಚೋರಾಡಿ ರಾಜೀವ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಮೋಹನ್ ಉಡುಪ ವಂದಿಸಿ ಉಪಾಧ್ಯಕ್ಷ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಆಯೋಜಿಸಿದ್ದ ಉತ್ತಮ ವರದಿ ಮಾಡಿದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News