ಸಂಪುಟ ವಿಸ್ತರಣೆಗೆ ವಿಪಕ್ಷಗಳ ಸಲಹೆ ಅಗತ್ಯವಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-08-05 12:58 GMT

ಬೆಂಗಳೂರು, ಆ. 5: ಸಚಿವ ಸಂಪುಟ ರಚನೆ ಯಾವಾಗ ಮಾಡಬೇಕು ಎಂಬುದು ನನಗೆ ಗೊತ್ತಿದೆ. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ವಿಪಕ್ಷಗಳ ಸಲಹೆ ಪಡೆಯುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಸೋಮವಾರ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ವರಿಷ್ಠರ ಸಲಹೆ, ಸೂಚನೆಗಳನ್ನು ಪಡೆದೆ ಸಂಪುಟ ವಿಸ್ತರಣೆ ಮಾಡಬೇಕಿದೆ. ಸಂಪುಟ ರಚನೆಯಾಗಿಲ್ಲ ಎಂದು ಅಭಿವೃದ್ಧಿ ಕಾರ್ಯಗಳೇನು ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಪಕ್ಷಗಳನ್ನು ಕೇಳಿ ಸಂಪುಟ ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಇನ್ನು ಇಪ್ಪತ್ತನಾಲ್ಕು ಗಂಟೆಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಸಿದ್ದ. ಅದಕ್ಕೆ ಪ್ರಧಾನಿ ಮೋದಿ ಹಾಗೂ ಪಕ್ಷದ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಸೇರಿದಂತೆ ವರಿಷ್ಠರ ಸಲಹೆ ಅಗತ್ಯ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬ ಆಸೆ ನನಗೂ ಇದೆ. ಸಂಪುಟ ವಿಸ್ತರಣೆ ಮಾಡಿದರೆ ಎಲ್ಲ ಸಚಿವರು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಲಿದ್ದಾರೆ. ಸಂಜೆ ದಿಲ್ಲಿಗೆ ತೆರಳಿ ವರಿಷ್ಠರ ಜತೆ ಸಮಾಲೋಚನೆ ನಡೆಸುತ್ತೇನೆ. ಅವರು ಸೂಚನೆ ನೀಡಿದ ಕೂಡಲೇ ಸಂಪುಟ ವಿಸ್ತರಣೆಯಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News