ಉಪ ಚುನಾವಣೆಗೆ ಸ್ಪರ್ಧಾಕಾಂಕ್ಷಿಯಲ್ಲ: ನಿಖಿಲ್ ಕುಮಾರಸ್ವಾಮಿ

Update: 2019-08-05 16:32 GMT

ಬೆಂಗಳೂರು, ಆ.5: ಕೆ.ಸಿ.ನಾರಾಯಣಗೌಡ ಅನರ್ಹತೆಯಿಂದ ತೆರವಾಗಿರುವ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ನಗರದ ಜೆಪಿ ಭವನದಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಚುನಾವಣೆಗಳಲ್ಲಿಯೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದವರೇ ನಿಲ್ಲಬೇಕು ಎಂದಿಲ್ಲ. ಅನೇಕ ಜನ ಕಾರ್ಯಕರ್ತರು ಹಾಗೂ ಮುಖಂಡರಿದ್ದಾರೆ. ಅವರನ್ನೇ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಉಪ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸಬೇಕು ಎಂಬ ಒತ್ತಾಯ ಏಕೆ ಕೇಳಿ ಬರುತ್ತಿದೆ ಎಂದು ನನಗೆ ತಿಳಿದಿಲ್ಲ. ಕೆ.ಆರ್.ಪೇಟೆ, ಹುಣಸೂರು, ಮಹಾಲಕ್ಷ್ಮಿ ಲೇಔಟ್, ಆರ್‌ಆರ್ ನಗರ ಕ್ಷೇತ್ರಗಳ ಸಭೆ ನಡೆಸಿ ಆಕಾಂಕ್ಷಿಗಳ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸುತ್ತೇವೆ. ವರಿಷ್ಠರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದು ನಿಖಿಲ್ ಹೇಳಿದರು.

ಅನರ್ಹಗೊಂಡಿರುವ ಎಲ್ಲರ ಕ್ಷೇತ್ರಗಳಲ್ಲಿಯೂ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ನಾನು ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಚಾರಕ್ಕೆ ಹೋಗುತ್ತೇನೆ. ಜೆಡಿಎಸ್ ಪಕ್ಷಕ್ಕೆ ಯುವಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸುವುದರ ಜತೆಗೆ ಪಕ್ಷ ಸಂಘಟನೆಗೂ ಒತ್ತು ನೀಡಲಾಗುತ್ತದೆ. ಮಾಜಿ ಪ್ರಧಾನಿ ದೇವೇಗೌಡರು ಇಳಿವಯಸ್ಸಿನಲ್ಲಿಯೂ ಪಕ್ಷದ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಅವರು ಎಲ್ಲರಿಗೂ ಆದರ್ಶವಾಗಿದ್ದಾರೆ ಎಂದರು.

ಪಕ್ಷದ ಪ್ರಾಮಾಣಿಕ, ನಿಷ್ಠಾವಂತ ಕಾರ್ಯಕರ್ತರ ಸಭೆಯನ್ನು ಆ.7 ರಂದು ಕರೆಯಲಾಗಿದೆ. ಸರಕಾರವಿಲ್ಲದ ಸಂದರ್ಭದಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹ ತರುವುದು ಅವಶ್ಯಕ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು. ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಮಾಜಿ ಸಚಿವ ಜಿ.ಟಿ.ದೇವೇಗೌಡ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ, ಅವರು ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರೊಂದಿಗಿನ ಸಂಬಂಧ ಕಳೆದುಕೊಳ್ಳುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News