ಅತ್ಯಾಚಾರ ಪ್ರಕರಣ: ಉ.ಪ್ರದೇಶ ಬಿಜೆಪಿ ಶಾಸಕನನ್ನು ಗಲ್ಲಿಗೇರಿಸಲು ಆಗ್ರಹಿಸಿ ಧರಣಿ

Update: 2019-08-05 18:48 GMT

ಚಿಕ್ಕಮಗಳೂರು, ಆ.5: ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಯುವತಿಯ ಅತ್ಯಾಚಾರ ನಡೆಸಿ ಆಕೆಯನ್ನು ತನ್ನ ಹಿಂಬಾಲಕರ ಮೂಲಕ ಹತ್ಯೆ ಮಾಡಿಸಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲದೀಪ್‍ಸಿಂಗ್ ಸಿಂಗಾರ್ ನನ್ನು ಗಲ್ಲಿಗೇರಿಸಬೇಕೆಂದು ಜಿಲ್ಲೆಯ ವಿವಿಧ ಸಮಾನ ಮನಸ್ಕ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಎಲ್.ಮೂರ್ತಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಬಿಎಸ್ಪಿ ಮುಖಂಡ ಕೆ.ಟಿ.ರಾಧಕೃಷ್ಣ, ರಾಧಸುಂದರೇಶ್, ಕರ್ನಾಟಕ ರಕ್ಷಣ ವೇದಿಕೆ ತೇಗೂರು ಜಗದೀಶ್, ರೈತ ಮುಖಂಡ ಗುರುಶಾಂತಪ್ಪ, ಅನೀಲ್ ಆನಂದ್ ನೇತೃತ್ವದಲ್ಲಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಧರಣಿ ನಡೆಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಧರಣಿ ವೇಳೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ಮಾತನಾಡಿ, ಮನುವಾದದಂತೆ ಆಡಳಿತ ನಡೆಸುತ್ತಿರುವ ಕೇಂದ್ರ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಮನುವಾದವನ್ನು ಹಾಗೂ ಮನುವಾದದ ಈ ಸರಕಾರಗಳನ್ನು ತ್ಯಜಿಸಿ, ಚುನಾವಣೆಯಲ್ಲಿ ಮನೆಗೆ ಕಳುಹಿಸುವ ಮೂಲಕ ಮಹಿಳೆಯರನ್ನು ರಕ್ಷಿಸುವ ಹೊಣೆ ನಮ್ಮ ಮೇಲೆ ಇದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರ ಮಹಿಳೆಯರು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡ ಎಂ.ಎಲ್.ಮೂರ್ತಿ ಮಾತನಾಡಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಸರಕಾರವನ್ನು ವಜಾ ಮಾಡಬೇಕು ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್‍ಸಿಂಗ್ ಸಿಂಗಾರ್ ಮರಣದಂಡನೆಗೆ ನ್ಯಾಯಾಲಯ ಆದೇಶ ನೀಡಬೇಕು. ಸಂತ್ರಸ್ತ ಬಾಲಕಿ ಕುಟುಂಬ ವರ್ಗದವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News