ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಬುಧವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Update: 2019-08-06 14:22 GMT

ಚಿಕ್ಕಮಗಳೂರು, ಆ.6: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬುಧವಾರವೂ ಮಲೆನಾಡು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಜಿಲ್ಲೆಯ ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ತಾಲೂಕಿನ (ಕಸಬಾ, ಅಂಬಳೆ, ಲಕ್ಯಾ ಹೋಬಳಿಗಳನ್ನು ಹೊರತು ಪಡಿಸಿ) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮಲೆನಾಡು ಭಾಗದಲ್ಲಿ ಕಳೆದ ಆರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಭಾಗದ ನದಿಗಳು, ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಅಲ್ಲದೇ ಧರೆ ಕುಸಿತ, ಸೇತುವೆ ಮುಳುಗಡೆಯಂತಹ ಘಟನೆಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಈ ತಾಲೂಕುಗಳ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಭಾರೀ ಮಳೆ ಹಿನ್ನೆಯಲ್ಲಿ ಸೋಮವಾರ ಮೂಡಿಗೆರೆ ತಾಲೂಕಿಗೆ ಮಾತ್ರ ರಜೆ ಘೋಷಣೆ ಮಾಡಿದ್ದ ಜಿಲ್ಲಾಧಿಕಾರಿ, ಸೋಮವಾರ ಕೊಪ್ಪ, ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ ಹಾಗೂ ನರಸಿಂಹರಾಜಪುರ ತಾಲೂಕುಗಳಿಗೂ ರಜೆ ವಿಸ್ತರಿಸಿದ್ದರು. ಮಂಗಳವಾರ ಸಂಜೆಯೂ ಮಳೆ ತೀವ್ರವಾಗುತ್ತಿರುವುದರಿಂದ ಬುಧವಾರವೂ ಈ ತಾಲೂಕುಗಳ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ರಜೆ ಘೋಷಣೆ ಮಾಡಿ ಎಲ್ಲ ತಾಲೂಕುಗಳ ತಹಶೀಲ್ದಾರ್ ಹಾಗೂ ಶಿಕ್ಷಣಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News