×
Ad

ಸಂತ್ರಸ್ತರ ನೆರವಿಗೆ ಉದಾರ ದೇಣಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

Update: 2019-08-09 19:55 IST

ಬಾಗಲಕೋಟೆ, ಆ. 9: ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ವರೆಗೂ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮುಧೋಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರ ನೆರವಿಗೆ ದಾನಿಗಳು ಮುಂದೆ ಬರಬೇಕು ಎಂದು ಕೋರಿದರು.

ಮನೆಗಳನ್ನು ಕಳೆದುಕೊಂಡಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡುವ ಕಾರ್ಯ ಆಗಬೇಕಿದೆ. ಕೇಂದ್ರ ಸರಕಾರದೊಂದಿಗೆ ನಿರಂತರವಾಗಿ ಸಂಪರ್ಕಲ್ಲಿದ್ದೇನೆ. ರಾಜ್ಯದಲ್ಲಿರುವಂತಹ ಎಲ್ಲ ಪ್ರತಿಷ್ಠಿತ ಕೈಗಾರಿಕೋದ್ಯಮಿಗಳು ಹಾಗೂ ದಾನಿಗಳು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೊಡ್ಡ ಪ್ರಮಾಣದಲ್ಲಿ ನೆರವು ನೀಡಬೇಕು ಎಂದು ಅವರು ಮನವಿ ಮಾಡಿದರು.

ಈಗಾಗಲೇ ಇನ್ಫೋಸಿಸ್ ಫೌಂಡೇಷನ್ 10 ಕೋಟಿ ರೂ.ನೆರವು ಘೋಷಿಸಿದೆ. ಅದೇ ರೀತಿ ಮಾಜಿ ಸಚಿವ ಮುರುಗೇಶ್ ನಿರಾಣಿ 1 ಕೋಟಿ ರೂ.ದೇಣಿಗೆ ನೀಡಲು ಮುಂದಾಗಿದ್ದಾರೆ. ಇತರೆ ಸಂಘ-ಸಂಸ್ಥೆಗಳು ಸರಕಾರದ ಜೊತೆ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ಇದುವರೆಗೆ 63ಗ್ರಾಮಗಳು ಪ್ರವಾಹ ಪೀಡಿತವಾಗಿದ್ದು, ಇಲ್ಲಿನ 6381 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಸಂತ್ರಸ್ತರ ನೆರವಿಗಾಗಿ 42 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ 11,970 ಜನರಿಗೆ ಆಶ್ರಯ ಕಲ್ಪಿಸಲಾಗಿದೆ. ಪ್ರವಾಹ ಪೀಡಿತರ ಆರೋಗ್ಯದ ಹಿತದೃಷ್ಟಿಯಿಂದ 92 ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಈಗಾಗಲೆ 19 ಸಾವಿರಕ್ಕೂ ಅಧಿಕ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಮೇವಿನ ವ್ಯವಸ್ಥೆ ಮಾಡಲಾಗಿದೆ. ಜಾನುವಾರುಗಳಿಗೆ ಅಗತ್ಯ ಮೇವು ದಾಸ್ತಾನು ಮಾಡಿದ್ದು, ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಹೆಕ್ಟೆರ್ ಜಮೀನು ಮುಳುಗಡೆಯಾಗಿದೆ. ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಳುಗಡೆ ಪ್ರಮಾಣವೂ ಹೆಚ್ಚುವ ಸಾಧ್ಯತೆಗಳಿವೆ. ಸದ್ಯ ಜಿಲ್ಲೆಯಲ್ಲಿ ಪರಿಹಾರ ಕಾರ್ಯಾಕ್ಕಾಗಿ 10 ಕೋಟಿ ರೂ.ಹೆಚ್ಚುವರಿಯಾಗಿ ಬಿಡುಗಡೆ ಮಾಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News