ಮಳೆ ಮುನ್ಸೂಚನೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಬಿಬಿಎಂಪಿ ಅಗತ್ಯ ಮುನ್ನೆಚ್ಚರಿಕೆ

Update: 2019-08-09 16:06 GMT

ಬೆಂಗಳೂರು, ಆ. 9: ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ, ಬಿಬಿಎಂಪಿಯು ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮೇಯರ್ ಗಂಗಾಬಿಕೆ ತಿಳಿಸಿದ್ದಾರೆ

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜಕಾಲುವೆ ವಿಭಾಗದ ಮುಖ್ಯ ಅಭಿಯಂತರರನ್ನು ಕರೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು.

ನಗರದಲ್ಲಿ ಭಾರಿ ಮಳೆ ಬಂದು ಪ್ರವಾಹ ಉಂಟಾದರೆ ಏನೆಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಈ ಹಿಂದೆ ಸಿಎಂ ಯಡಿಯೂರಪ್ಪ ಜೊತೆ ಸಭೆ ನಡೆಸಲಾಗಿದೆ. ಆ ಬಳಿಕ ರಾಜಕಾಲುವೆ ವಿಭಾಗದ ಅಧಿಕಾರಿಗಳು ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗುವ 1ಸಾವಿರಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಿದ್ದಾರೆ ಎಂದರು.

ಸದ್ಯ ನಗರದ 182 ಸೂಕ್ಷ್ಮ ಪ್ರದೇಶಗಳಲ್ಲಿ ಮಾತ್ರ ಪ್ರವಾಹ ಉಂಟಾಗುವ ಪರಿಸ್ಥಿತಿ ಇದ್ದು, 80ರಿಂದ 120ಮಿ.ಮೀ ಮಳೆಯಾದರೆ ಯಾವುದೇ ಸಮಸ್ಯೆ ಎದುರಾಗುವುದುದಿಲ್ಲ. 120 ಮಿ.ಮೀ ಮೇಲ್ಪಟ್ಟು ಮಳೆ ಬಂದರೆ ಮಾತ್ರ ಪ್ರವಾಹದ ಸಮಸ್ಯೆ ಎದುರಾಗಲಿದೆ. 182ರ ಪೈಕಿ 28 ಅತಿಸೂಕ್ಷ್ಮ ಪ್ರದೇಶಗಳಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ(ಕೆಎಸ್‌ಎನ್‌ಎಂಡಿಸಿ)ದ ಸಹಯೋಗದಲ್ಲಿ 18 ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ನೀರಿನ ಮಟ್ಟ ಅಳೆಯುವ ಸಂವೇದಕಗಳನ್ನು ಅಳವಡಿಸಲಾಗಿದೆ. ಕೆಎಸ್‌ಎನ್‌ಎಂಡಿಸಿ ಉಚಿತವಾಗಿ ಸೆನ್ಸಾರ್‌ಗಳನ್ನು ಅಳವಡಿಸಿದ್ದು, ಪಾಲಿಕೆಯಿಂದ ಯಾವುದೇ ಹಣ ವ್ಯಯಿಸಿಲ್ಲ. ಉಳಿದ 10 ಅತಿಸೂಕ್ಷ್ಮ ಪ್ರದೇಶಗಳಲ್ಲಿಯೂ ಶೀಘ್ರ ಸೆನ್ಸಾರ್ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಒಂದು ಸೆನ್ಸಾರ್ ಅಳವಡಿಸಲು 35 ಸಾವಿರ ರೂ.ವೆಚ್ಚ ತಗಲುತ್ತದೆ. ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಕೆ ಮಾಡಲಾಗಿದೆ. ಅದರಿಂದ ನಿತ್ಯ ಅಂತರ್ಜಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೆ ಮಾಹಿತಿ ತಿಳಿಯಲಿದೆ.

ಪಾಲಿಕೆ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನೆ ಮಾಡಲಿದ್ದಾರೆ. ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪುಬಣ್ಣದಲ್ಲಿ ಗುರುತಿಸಲಾಗುತ್ತದೆ.

ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪುಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು ಎಂದರು.

ತಾತ್ಕಾಲಿಕ ಕೊಠಡಿ ಸ್ಥಾಪನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಅನಾಹುತಗಳ ನಿವಾರಣೆಗೆ ಈಗಾಗಲೇ 9 ಕಡೆ ಶಾಶ್ವತ ನಿಯಂತ್ರಣಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಇದೀಗ ಆಯಾ ವಲಯದ ಪ್ರತಿ ಉಪವಿಭಾಗ ಕಚೇರಿಗಳಲ್ಲಿ 63 ಕಡೆ ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ತಾತ್ಕಾಲಿಕ ನಿಯಂತ್ರಣಾ ಕೊಠಡಿಗಳಲ್ಲಿ ತುರ್ತು ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಯಂತ್ರಗಳು, ಸಲಕರಣೆಗಳು, ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದ್ದು, ಸಮಸ್ಯೆ ಇರುವ ಕಡೆ ಸಿಬ್ಬಂದಿ ತೆರಳಿ ನಿವಾರಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಮರ ತೆರವಿಗೆ 28 ತಂಡ: ಮಳೆಗಾಲದಲ್ಲಿ ಧರೆಗುರುಳುವ ಮರಗಳನ್ನು ತೆರವುಗೊಳಿಲು ಈಗಾಗಲೇ 21ತಂಡಗಳಿವೆ. ಇದೀಗ ಹೆಚ್ಚುವರಿಯಾಗಿ 7 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ.

ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರ ಸಲಕರಣೆಗಳನ್ನು ನೀಡುವುದರ ಜತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗೆ ವಾಹನಗಳನ್ನು ಕೂಡಾ ನಿಗದಿ ಮಾಡಲಾಗಿದೆ ಎಂದು ಮೇಯರ್ ತಿಳಿಸಿದರು.

ಟ್ರಾಶ್ ಬ್ಯಾರಿಯರ್ ಅಳವಡಿಕೆ: ರಾಜಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗುತ್ತಿದ್ದ ಕಸವನ್ನು ತೆರವುಗೊಳಿಸಲು ಈಗಾಗಲೇ ಐದು ಕಡೆ ಟ್ರಾಶ್ ಬ್ಯಾರಿಯರ್(ಕಸ ತಡೆಯುವ ಹಗುರ ಅಲ್ಯೂಮಿನಿಯಂ ಬಲೆ) ಅಳವಡಿಸಲಾಗಿದೆ. ಉಳಿದ ಕಡೆ ಟ್ರಾಶ್ ಬ್ಯಾರಿಯರ್ ಅಳವಡಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News