​ಮುಕುಲ್ ವಾಸ್ನಿಕ್ ಕಾಂಗ್ರೆಸ್ ಅಧ್ಯಕ್ಷ?

Update: 2019-08-10 03:47 GMT

ಹೊಸದಿಲ್ಲಿ, ಆ.10: ಪಕ್ಷದ ನೂತನ ಅಧ್ಯಕ್ಷನನ್ನು ಆಯ್ಕೆ ಮಾಡುವ ಸಲುವಾಗಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಮಹತ್ವದ ಸಭೆ ಶನಿವಾರ ನಡೆಯಲಿದೆ. ಈ ಸಂಬಂಧ ಶುಕ್ರವಾರ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ನಡೆದಿದ್ದು, ರಾಹುಲ್‌ ಗಾಂಧಿಯವರಿಂದ ತೆರವಾದ ಸ್ಥಾನಕ್ಕೆ ಮುಕುಲ್ ವಾಸ್ನಿಕ್ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದೆ.
ರಾಜ್ಯ ಮುಖಂಡರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷಗಳ ಮುಖಂಡರ ಜತೆ ಚರ್ಚಿಸಿ ನಿರ್ಧಾರಕ್ಕೆ ಬರುವುದು ಸೂಕ್ತ ಎಂದು ನಿರ್ಗಮನ ಅಧ್ಯಕ್ಷ ರಾಹುಲ್‌ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಎರಡು ದಶಕದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬಕ್ಕೆ ಸೇರದ ವ್ಯಕ್ತಿಯೊಬ್ಬರು ಅಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ. ವ್ಯಾಪಕ ಆಡಳಿತ ಅನುಭವ ಹೊಂದಿರುವ ಮಾಜಿ ಸಚಿವ ಮುಕುಲ್ ವಾಸ್ನಿಕ್ (59) ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಸಾಂಸ್ಥಿಕ ಚುನಾವಣೆಗಳು ಪೂರ್ಣಗೊಳ್ಳುವವರೆಗೂ ಅವರು ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.
ದೇಶದ ಅತ್ಯಂತ ಹಳೆಯ ಪಕ್ಷ ಎಂಬ ಹೆಗ್ಗಳಿಕೆಯ ಕಾಂಗ್ರೆಸ್ ಪಕ್ಷ 134 ವರ್ಷಗಳ ಇತಿಹಾಸ ಹೊಂದಿದ್ದು, ನೆಹರೂ- ಗಾಂಧಿ ಕುಟುಂಬದವರೇ ಅತಿಹೆಚ್ಚು ಅವಧಿಗೆ ಅಧ್ಯಕ್ಷರಾಗಿದ್ದಾರೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇದೀಗ ಸಕ್ರಿಯ ರಾಜಕೀಯದಲ್ಲಿದ್ದರೂ, ಅಧ್ಯಕ್ಷ ಸ್ಥಾನದ ಹೊಣೆ ನಿಭಾಯಿಸಲು ಪ್ರಿಯಾಂಕಾ ನಿರಾಕರಿಸಿದ್ದಾರೆ.
ಸೋನಿಯಾ ನಿವಾಸದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಎ.ಕೆ.ಆ್ಯಂಟನಿ, ಅಹ್ಮದ್ ಪಟೇಲ್ ಹಾಗೂ ಕೆ.ವಿ.ವೇಣುಗೋಪಾಲ್ ಸೇರಿದಂತೆ ಹಲವು ಮಂದಿ ಮುಖಂಡರು ಭಾಗವಹಿಸಿದ್ದರು. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಇನ್ನು ವಿಳಂಬ ಮಾಡಬಾರದು ಎಂದು ಈ ಸಭೆ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ, ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಮೇ ತಿಂಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News