ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Update: 2019-08-10 16:38 GMT

ಬೆಳಗಾವಿ, ಆ.10: ಧಾರಾಕಾರ ಮಳೆ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ಬೆಳಗಾವಿ ನಗರದ ವಿವಿಧ ಪ್ರದೇಶಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊಸದಿಲ್ಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಮಳೆಯಿಂದ ಉಂಟಾಗಿರುವ ಜೀವಹಾನಿ, ಆಸ್ತಿಪಾಸ್ತಿಗಳ ನಷ್ಟ ಹಾಗೂ ಬೆಳೆ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಂತರ ರಸ್ತೆ ಮಾರ್ಗವಾಗಿ ಬೆಳಗಾವಿ ನಗರಕ್ಕೆ ಆಗಮಿಸಿದ ನಿರ್ಮಲಾ ಸೀತಾರಾಮನ್, ಧಾಮಣೆ ರಸ್ತೆಯಲ್ಲಿ ಸಂಚರಿಸಿ, ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು. ಇದಾದ ಬಳಿಕ ಖಾಸಬಾಗ ಪ್ರದೇಶದಲ್ಲಿರುವ ಪ್ರವಾಹ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಭೇಟಿ ಮಾಡಿದರು. ಸಂತ್ರಸ್ತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿರುವ ಸಾಯಿ ಭವನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್, ಜನರ ಅಹವಾಲುಗಳನ್ನು ಆಲಿಸಿದರಲ್ಲದೇ ಆದಷ್ಟು ಬೇಗನೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಸಂತ್ರಸ್ತ ಮಹಿಳೆ ವಿದ್ಯಾರಾಣಿ ಮಕಾತಿ, ಮನೆ ಬಿಟ್ಟುಬಂದು ಆಹಾರ ಸಿಗದೇ ಪರದಾಡುವಂತಾಗಿದ್ದು, ತಕ್ಷಣವೇ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು. ನಾವು ನೇಕಾರಿಕೆ ಮಾಡಿ ಹೊಟ್ಟೆ ತುಂಬಿಕೊಳ್ಳಬೇಕಿದೆ. ಮಳೆರಾಯನ ರೌದ್ರನರ್ತನಕ್ಕೆ ಸಿಲುಕಿ ನಮ್ಮ ಮನೆಗಳು ನೆಲಕಚ್ಚಿವೆ. ಆದುದರಿಂದ, ಸೂಕ್ತ ಪುನರ್ವಸತಿ ಕಲ್ಪಿಸಬೇಕು ಎಂದು ಅವರು ಕೇಳಿಕೊಂಡರು.

ಈ ಸಂದರ್ಭದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News