‘ಕಿಸಾನ್ ಸಮ್ಮಾನ್’ ಹೆಚ್ಚುವರಿ ಆರ್ಥಿಕ ನೆರವು ಯೋಜನೆಗೆ ಸಿಎಂ ಯಡಿಯೂರಪ್ಪ ಚಾಲನೆ

Update: 2019-08-14 15:37 GMT

ಬೆಂಗಳೂರು, ಆ. 14: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹೆಚ್ಚುವರಿಯಾಗಿ 2ಸಾವಿರ ರೂ.ಆರ್ಥಿಕ ಸಹಾಯ ನೀಡುವ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರಕಾರದ ಮಹತ್ವಕಾಂಕ್ಷಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಲಕ್ಷ ರೈತರಿಗೆ ನಾಳೆಯಿಂದ ತಲಾ 2 ಸಾವಿರ ರೂ.ಹಣ ಜಮೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಉದ್ದೇಶಿತ ಯೋಜನೆಯಡಿ ಕೇಂದ್ರ ಸರಕಾರ 6 ಸಾವಿರ ರೂ. ಹಾಗೂ ರಾಜ್ಯ ಸರಕಾರ 4 ಸಾವಿರ ರೂ.ಗಳನ್ನು ಎರಡು ಕಂತುಗಳಲ್ಲಿ ಪಾವತಿಸಲಿದೆ ಎಂದ ಅವರು, ಒಟ್ಟಾರೆ 60 ಲಕ್ಷ ರೈತರಿಗೆ ನೆರವು ನೀಡಲಿದ್ದು, ಇನ್ನೂ ಮೂರ್ನಾಲ್ಕು ದಿನಗಳಲ್ಲಿ ರೈತರ ಖಾತೆಗೆ ಹಣ ಸಂದಾಯವಾಗಲಿದೆ ಎಂದರು.

ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2 ಸಾವಿರ ರೂ.ಖಜಾನೆ ಮೂಲಕ ಜಮೆಯಾಗಲಿದೆ. ಎರಡನೇ ಹಂತದಲ್ಲಿ ಆದಷ್ಟು ಬೇಗ ಹಣ ಜಮೆ ಆಗಲಿದೆ ಎಂದ ಅವರು, ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವುದು ನಮ್ಮ ಸರಕಾರದ ಆದ್ಯತೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಸಿಎಂ ಕಾರ್ಯದರ್ಶಿ ಶಿವಯೋಗಿ ಕಳಸದ್, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News