ನೆರೆ ಹಿನ್ನಲೆ ಶ್ರೀಕೃಷ್ಣ ಜಯಂತಿ ಸರಳ ಆಚರಣೆ: ಅಪರ ಜಿಲ್ಲಾಧಿಕಾರಿ

Update: 2019-08-14 16:27 GMT

ಉಡುಪಿ, ಆ.14: ರಾಜ್ಯದೆಲ್ಲೆಡೆ ವಿಪರೀತ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಬಾಂಗಣದಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನೆರೆ ಸಂತ್ರಸ್ತರಿಗೆ ಅವಶ್ಯಕವಿರುವ ವಸ್ತುಗಳನ್ನು ತಲುಪಿಸುವ ಕಾರ್ಯಕ್ಕೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿರುವುದನ್ನು ಅಭಿನಂದಿಸಿದರು.

ಉಡುಪಿ ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಎಸ್. ಪುಟ್ಟಣ್ಣ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸುವಂತೆ ಹಾಗೂ ಕೃಷ್ಣ ಜಯಂತಿ ಆಚರಣೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ನೆರೆ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವಂತೆ ಸಭೆಯಲ್ಲಿ ಮನವಿ ಮಾಡಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ,ನಗರಸಬೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತ ರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪೂರ್ಣಿಮ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News