ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆಗೆ ಚಿಂತನೆ: ಬಿ.ಎಸ್.ಯಡಿಯೂರಪ್ಪ

Update: 2019-08-14 17:50 GMT

ಬೆಂಗಳೂರು, ಆ.14: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪತಿಳಿಸಿದ್ದಾರೆ.

ಬುಧವಾರ ಬೆಂಗಳೂರು ಅಭಿವೃದ್ಧಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಬೆಂಗಳೂರಿನ ಎಲ್ಲ ಸಮಸ್ಯೆಗಳಿಗೆ ಅದರಲ್ಲೂ ವಾಹನ ದಟ್ಟಣೆ, ಕಸದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದ್ದು, ಬೆಂಗಳೂರಿನ ಶಾಸಕರು, ಸಂಸದರು ನೀಡಿರುವ ಸಲಹೆಗಳನ್ನು ಸ್ವೀಕರಿಸಲಾಗಿದೆ. ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಬ್-ಅರ್ಬನ್ ರೈಲು ವ್ಯವಸ್ಥೆ ಅಗತ್ಯವಿದೆ ಎಂದು ತಿಳಿಸಿದರು.

ಹೊರವರ್ತುಲ ರಸ್ತೆಗೆ ಹಾಗೂ ಪೆರಿಫೆರಲ್ ರಿಂಗ್ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ವಾಹನ ದಟ್ಟಣೆ ಸಮಸ್ಯೆಯನ್ನು ಬಗೆಹರಿಸಲಾಗುವುದು ಹಾಗೂ ಉಪನಗರಗಳ ಅಭಿವದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿ ಹಾಗೂ ಕೊಳಚೆ ನಿವಾಸಿಗಳಿಗಾಗಿ ಬಹುಮಹಡಿ ಕಟ್ಟಡಗಳಲ್ಲಿ ವಸತಿ ಕಲ್ಪಿಸುವ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನಿಸಲಾಗುವುದು ಎಂದರು.

ಕೊಳಚೆ ನೀರನ್ನು ಸಂಸ್ಕರಿಸಿ ಉಪಯೋಗಿಸುವ ಯೋಜನೆಯ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು, ನಮ್ಮ ಮೆಟ್ರೊ ಯೋಜನೆಯ ಮಾರ್ಗವನ್ನು ತಾವರೆಕೆರೆ ಮತ್ತು ಮದ್ರಾಸ್ ರಸ್ತೆಯವರೆಗೆ ವಿಸ್ತರಿಸಿದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಬಹುದಾಗಿದೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಕೇವಲ ಕಾವೇರಿ ನದಿ ನೀರಿನ ಮೂಲವನ್ನು ಮಾತ್ರ ಅವಲಂಬಿಸದೆ ಈ ಹಿಂದೆ ರೂಪಿಸಿದ್ದ ಶ್ರೀರಂಗ ಯೋಜನೆಯಡಿ ಹೇಮಾವತಿ, ಮೇಕೆದಾಟು ಹಾಗೂ ಎತ್ತಿನಹೊಳೆಯಿಂದ ನೀರು ತರುವ ಪ್ರಸ್ತಾವನೆ ನನೆಗುದಿಗೆ ಬಿದ್ದಿದ್ದು ಅದನ್ನು ಅನುಷ್ಠಾನಗೊಳಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸ ಗೊಬ್ಬರ ಸಚಿವ ಸದಾನಂದ ಗೌಡ, ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News