ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ

Update: 2019-08-16 12:33 GMT

ಹೊಸದಿಲ್ಲಿ, ಆ. 16: ಮುಖ್ಯಮಂತ್ರಿ ಯಡಿಯೂರಪ್ಪನವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.

ಶುಕ್ರವಾರ ದಿಲ್ಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ನೇತೃತ್ವದ ಕೇಂದ್ರ ಸಚಿವರು, ಬಿಜೆಪಿ ಶಾಸಕರನ್ನು ಒಳಗೊಂಡ ನಿಯೋಗ ಪ್ರವಾಹದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ಕೋರಿತು.

ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿಯವರು ಕೂಡಲೇ ಕರ್ನಾಟಕ ರಾಜ್ಯದಲ್ಲಿನ ನಷ್ಟದ ಅಂದಾಜು ಮಾಡಲು ಕೇಂದ್ರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು. ಕೇಂದ್ರ ತಂಡ ವರದಿ ನೀಡಿದ ಕೂಡಲೇ ರಾಜ್ಯಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ಗೊತ್ತಾಗಿದೆ.

ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿ, ಪ್ರಧಾನಿ ಮೋದಿಯವರಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ನಿಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News