ಟೆಲಿಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಸರಕಾರದ ತೀರ್ಮಾನ

Update: 2019-08-18 12:41 GMT

ಬೆಂಗಳೂರು, ಆ. 18: ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದ್ದು ನಾಳೆ(ಆ.19) ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ರವಿವಾರ ಇಲ್ಲಿನ ಡಾಲರ್ಸ್‌ ಕಾಲನಿಯಲ್ಲಿರುವ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಟೆಲಿಫೋನ್ ಕದ್ಧಾಲಿಕೆ ಪ್ರಕರಣವನ್ನು ಸಿಬಿಐ ವಹಿಸಲಾಗುವುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಕಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಮುಖಂಡರು ಫೋನ್ ಕದ್ಧಾಲಿಕೆ ಹಗರಣ ತನಿಖೆ ಸಿಬಿಐಗೆ ವಹಿಸಿರುವ ಸರಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೆ, ಬಿಜೆಪಿ ಸಿಬಿಐಯನ್ನು ತನ್ನ ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಫೋನ್ ಕದ್ದಾಲಿಕೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದ್ದರು. ಹೀಗಾಗಿ, ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನೆಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಫೋನ್ ಕದ್ದಾಲಿಕೆ ಅಕ್ಷಮ್ಯ ಅಪರಾಧ. ಯಾರದೇ ಟೆಲಿಫೋನ್ ಕದ್ದಾಲಿಸುವುದು ಸರಿಯಲ್ಲ. ತಪ್ಪಿತಸ್ಥರಿಗೆ ಕಾನೂನಿನ ಅನ್ವಯ ಶಿಕ್ಷೆಯಾಗಬೇಕು. ಹೀಗಾಗಿಯೇ, ಈ ಬಗ್ಗೆ ಸಮಗ್ರ ತನಿಖೆ ಅಗತ್ಯ. ಈ ಹಿನ್ನೆಲೆಯಲ್ಲಿ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸುವ ತೀರ್ಮಾನ ಮಾಡಲಾಗಿದೆ ಎಂದರು.

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆ ಸಂಬಂಧ ನಾಳೆ ಆದೇಶ ಹೊರಡಿಸಿ, ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದ ಅವರು, ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ಸತ್ಯಾಂಶ ಹೊರಬರಬೇಕೆಂಬುದು ಎಲ್ಲರ ಅಪೇಕ್ಷೆ. ಅದರಂತೆ ಸಿಬಿಐ ತನಿಖೆ ನಡೆದರೆ ಎಲ್ಲ ಸತ್ಯವೂ ಹೊರ ಬರಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಗುಪ್ತಚರ ಇಲಾಖೆ ಮೂಲಕ ಅಂದಿನ ಮಾಜಿ ಸಿಎಂ ಬಿಎಸ್‌ವೈ, ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಮುಖಂಡರು ಹಾಗೂ ಕೆಲ ಮಾಧ್ಯಮ ಪ್ರತಿನಿಧಿಗಳ ಫೋನ್ ಕದ್ದಾಲಿಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು.

‘ಫೋನ್ ಕದ್ಧಾಲಿಕೆ ಬಗ್ಗೆ ಸಿಬಿಐ ತನಿಖೆ ಅಥವಾ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಕಾರ ಪಡೆದು ತನಿಖೆ ನಡೆಸಿದರೂ ನನಗೆ ಯಾವುದೇ ಭಯವಿಲ್ಲ. ಎಲ್ಲ ತನಿಖೆಗೂ ಸಿದ್ದವಾಗಿದ್ದೇನೆ. ಸಿದ್ದರಾಮಯ್ಯ ಸಲಹೆಗೆ ತ್ವರಿತಗತಿ ಗೌರವ ನೀಡಿ ಸಿಬಿಐ ತನಿಖೆಗೆ ಆದೇಶ ನೀಡಿರುವುದನ್ನು ಸ್ವಾಗತಿಸುತ್ತೇನೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ. ಯಡಿಯೂರಪ್ಪ ಹತ್ತು ಜನ್ಮ ಎತ್ತಿ ಬಂದರೂ ಏನೇ ತನಿಖೆ ಮಾಡಿಸಿದರೂ ದೇವೇಗೌಡರ ಕುಟುಂಬವನ್ನು ಏನೂ ಮಾಡಲು ಸಾಧ್ಯವಿಲ್ಲ.’

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಫೋನ್ ಕದ್ದಾಲಿಕೆ ಪ್ರಕರಣದ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಕೇಂದ್ರದಲ್ಲಿ ಯಾವ ಸರಕಾರ ಇದೆ ಎಂಬುದು ಮುಖ್ಯವಲ್ಲ. ತನಿಖೆಯಿಂದ ಸತ್ಯಾಂಶ ಹೊರಬರಬೇಕು, ತಪ್ಪಿತಸ್ಥರ ವಿರುದ್ದ ಕ್ರಮ ಆಗಲೇಬೇಕು. ಕದ್ಧಾಲಿಕೆ ಮೂಲಕ ಬ್ಲಾಕ್‌ಮೇಲ್ ಮಾಡುವುದು ಭಯೋತ್ಪಾದನೆ ಕೃತ್ಯಕ್ಕೆ ಸಮ’

-ಎಚ್.ವಿಶ್ವನಾಥ್, ಅನರ್ಹ ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News