'ಆಪರೇಷನ್ ಕಮಲ’ದ ಬಗ್ಗೆಯೂ ಸಿಬಿಐ ತನಿಖೆ ನಡೆಸಲಿ: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-08-18 12:44 GMT

ಬೆಂಗಳೂರು, ಆ.18: ರಾಜ್ಯದಲ್ಲಿ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಮ್ಮ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ ಇದ್ದ ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

‘ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ ‘ಆಪರೇಷನ್ ಕಮಲ’ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಸಿಎಂ ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

‘ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಮುಖ್ಯಮಂತ್ರಿ ಬಿಎಸ್‌ವೈ ನಿರ್ಧಾರ ಸ್ವಾಗತಾರ್ಹ. ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ ಎಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಮತ್ತೊಂದು ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News