ಐಎಂಎ ಹಗರಣ ಸಿಬಿಐ ತನಿಖೆಗೆ: ಹೈಕೋರ್ಟ್‌ಗೆ ಹೇಳಿಕೆ ನೀಡಿದ ಎಜಿ

Update: 2019-08-20 16:21 GMT

ಬೆಂಗಳೂರು, ಆ.20: ಐಎಂಎ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಈಗಾಗಲೇ ಐಎಂಎ ಹಗರಣವನ್ನು ಸಿಬಿಐ ತನಿಖೆಗೆ ನೀಡಲಾಗಿದೆ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಹೈಕೋರ್ಟ್‌ಗೆ ತಿಳಿಸಿದರು. ಅಲ್ಲದೆ, ಹಗರಣದ ಪ್ರಗತಿಯ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಿದರು.

ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿರುವ ಐದು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಅಡ್ವೊಕೇಟ್ ಜನರಲ್ ಅವರು, ತನಿಖೆಯ ಪ್ರಗತಿ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠವು ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಪೂರ್ಣಕಾಲಿಕ ಸಕ್ಷಮ ಪ್ರಾಧಿಕಾರ ರಚಿಸಲು ಸೂಚಿಸಿತು. ಹಾಗೂ ಈ ಹಗರಣದ ತನಿಖೆಯನ್ನು ಈಗಾಗಲೇ ಸಿಬಿಐಗೆ ನೀಡಿದ್ದರಿಂದ ಎಸ್‌ಐಟಿ ಅವರು ಆಸ್ತಿ ಜಪ್ತಿ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕೆಂದು ಸೂಚಿಸಿತು. ಅರ್ಜಿ ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರವಾಗಿ ವಕೀಲ ಆರ್.ಕೋತ್ವಾಲ್, ಜಿ.ಆರ್.ಮೋಹನ್ ಸೇರಿ ಮತ್ತಿತರರು ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News