ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರಕಾರ ಬದ್ಧ: ಸಚಿವ ಸುರೇಶ್ ಕುಮಾರ್ ಭರವಸೆ

Update: 2019-08-21 16:58 GMT

ಮಡಿಕೇರಿ, ಆ.21: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಮಳೆಹಾನಿ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದು ನೂತನ ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶ ಕೊಡಗಿನ ಉಸ್ತುವಾರಿಯಾಗಿ ಜಿಲ್ಲೆಗೆ ಭೇಟಿ ನೀಡಿದ ಸಚಿವರು ಕುಶಾಲನಗರ, ನೆಲ್ಯಹುದಿಕೇರಿ ಬಳಿಯ ಕುಂಬಾರಗುಂಡಿ, ಸಿದ್ದಾಪುರ ಬಳಿಯ ಕರಡಿಗೋಡು ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳು, ತೋರ ಭೂ ಕುಸಿತ ಪ್ರದೇಶ, ಮಾಕುಟ್ಟ ರಸ್ತೆ ವೀಕ್ಷಣೆ ಹಾಗೂ ವಿರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಭೂಮಿ ಬಿರುಕು ಬಿಟ್ಟಿರುವ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿದರು.  

ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಜೊತೆ ಮಾತನಾಡಿದ ಸಚಿವರು ಪ್ರವಾಹದಿಂದ ತುಂಬಾ ತೊಂದರೆಗೆ ಒಳಗಾಗಿರುವವರು ಸ್ಥಳಾಂತರವಾಗಲು ಮನಸ್ಸು ಮಾಡಬೇಕು. ಸರ್ಕಾರದಿಂದ ಮನೆ ನಿರ್ಮಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು. ಇದಕ್ಕೆ ಅಲ್ಲಿನ ಸಂತ್ರಸ್ತರು ಕೂಲಿ ಮಾಡಿ ಬದುಕುತ್ತಿದ್ದೆವು, ಪ್ರವಾಹದಿಂದಾಗಿ ಮನೆ ಕಳೆದುಕೊಂಡಿದ್ದು, ದಿಕ್ಕು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡರು. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು. 

ಕುಂಬಾರಗುಂಡಿ ಮತ್ತು ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಈ ಸಂಬಂಧ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲಾಗುವುದು ಎಂದರು. 

ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಪ್ರವಾಹದಿಂದ ಸಾಕಷ್ಟು ಮನೆಗಳು ಹಾನಿಯಾಗಿದೆ. ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಪುನರ್ ವಸತಿ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಸುಮಾರು 190 ಕ್ಕೂ ಹೆಚ್ಚು ಮನೆಗಳು ಹಾನಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಕುಟುಂಬಗಳನ್ನು ಸ್ಥಳಾಂತರಿಸಿ ಮನೆ ನಿರ್ಮಿಸಿಕೊಡಬೇಕಿದೆ. ಈಗಾಗಲೇ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ 10 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಕೇಂದ್ರದ ಗೃಹ ಸಚಿವರು ಮತ್ತು ಹಣಕಾಸು ಸಚಿವರು ರಾಜ್ಯ ಪ್ರವಾಸ ಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದರು. 

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್‍ಗಳಾದ ಗೋವಿಂದರಾಜು, ಪುರಂದರ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಇಬ್ರಾಹಿಂ, ಜಿ.ಪಂ. ಎಂಜಿನಿಯರ್ ರೇವಣ್ಣವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News