ಕ್ರೀಡೆಗೆ ಹಿಂದಿಗಿಂತ ಹೆಚ್ಚಿನ ಅನುದಾನ: ಕೋಟ ಶ್ರೀನಿವಾಸ ಪೂಜಾರಿ

Update: 2019-08-23 15:55 GMT

ಉಡುಪಿ, ಆ.23: ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಹಿಂದಿಗಿಂತ ಹೆಚ್ಚಿನ ಅನುದಾನ ನೀಡಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ರಾಜ್ಯ ಸಚಿವ ಕೆಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ವತಿಯಿಂದ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ ಕರ್ನಾಟಕ ರಾಜ್ಯ ಅಂತರ ಜಿಲ್ಲಾ ಕಿರಿಯರ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ರಾಜ್ಯ ಕ್ರೀಡಾಪಟುಗಳು ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ತರಬೇತಿಯ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ. ಮುಂದೆ ಕ್ರೀಡೆಯ ಅಭಿವೃದ್ಧಿಗೆ ಬೇಕಾದ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಕ್ರೀಡಾಕೂಟವನ್ನು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಎಚ್. ಎಸ್.ಬಲ್ಲಾಳ್ ಉದ್ಘಾಟಿಸಿದರು. ಜಿಪಂ ಅಧ್ಯಕ್ಷ ದಿನಕರ ಬಾಬು ಧ್ವಜಾ ರೋಹಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ ವಹಿಸಿದ್ದರು.

ಬಡಗಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿ ಉದಯಕುಮಾರ್ ಶೆಟ್ಟಿ ಮುನಿಯಾಲು, ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಗೌರವ ಉಪಾಧ್ಯಕ್ಷ ಎಚ್.ಟಿ.ಮಹಾದೇವ, ಕಾರ್ಯದರ್ಶಿ ರಾಜ ವೇಲು, ಅಂತಾರಾಷ್ಟ್ರೀಯ ಅಥ್ಲಿಟ್‌ಗಳಾದ ಅಶ್ವಿನಿ ಅಕ್ಕುಂಜೆ, ರೋಹಿತ್ ಕುಮಾ್ ಕಟೀಲು ಮುಖ್ಯ ಅತಿಥಿಗಳಾಗಿದ್ದರು.

ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಜೈವಿಠಲ್, ಸಂಸ್ಥೆಯ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಅಧ್ಯಕ್ಷ ರಘುರಾಮ ನಾಯಕ್, ಸಮಿತಿಯ ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್ ಮೊದಲಾದವರು ಉಪಸ್ಥಿತರಿದ್ದರು.
ಕ್ರೀಡಾಕೂಟ ಸಂಘಟನಾ ಸಮಿತಿಯ ಅಧ್ಯಕ್ಷ, ಶಾಸಕ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ದಿನೇಶ್ ಕುಮಾರ್ ಸ್ವಾಗತಿಸಿದರು. ಆರೂರು ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News