ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಕಡೆ ಪೋಷಕರ ಒಲವು: ದಾಖಲಾತಿ ಸಂಖ್ಯೆಯಲ್ಲಿ ಹೆಚ್ಚಳ

Update: 2019-08-26 17:36 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.26: ರಾಜ್ಯದಲ್ಲಿ ಹಿಂದಿನ ಸರಕಾರ ಆರಂಭಿಸಿದ್ದ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳ ಪಾಲಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಅಧಿಕ ಸಂಖ್ಯೆಯಲ್ಲಿ ಮಕ್ಕಳು ದಾಖಲಾಗಿದ್ದಾರೆ.

ಹಿಂದಿನ ಮೈತ್ರಿ ಸರಕಾರ ಅವಧಿಯಲ್ಲಿ ಒಂದನೆ ತರಗತಿಯಿಂದಲೇ ಇಂಗ್ಲಿಷ್ ಕಲಿಸಬೇಕು ಎಂಬ ಉದ್ದೇಶದಿಂದ ಒಂದು ಸಾವಿರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಿದ್ದರು. ಈ ಶಾಲೆಗಳಲ್ಲಿ ಸುಮಾರು 26 ಸಾವಿರಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದರೆ, ಕನ್ನಡ ಮಾಧ್ಯಮ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ.

ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮ ಶಾಲೆಗಳು ಎರಡನ್ನೂ ತಾಳೆ ಮಾಡಿದರೆ ಶೇ.50 ಕ್ಕೂ ಅಧಿಕ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ದಾಖಲಿಸಲು ಒಲವು ತೋರುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ.

ಮೈತ್ರಿ ಸರಕಾರದಲ್ಲಿ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದು ಕುಮಾರಸ್ವಾಮಿ ಘೋಷಿಸಿದ್ದರು. ಆ ಸಂದರ್ಭದಲ್ಲಿ ಸಾಕಷ್ಟು ವಿರೋಧ, ಟೀಕೆಗಳೂ ಬಂದಿದ್ದವು. ಇದ್ಯಾವುದನ್ನೂ ಲೆಕ್ಕಿಸದ ಅವರು, ಜಾರಿ ಮಾಡಿದ್ದರು. ರಾಜ್ಯದಲ್ಲಿ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 276 ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್), 724 ಸಾಮಾನ್ಯ ಸರಕಾರಿ ಶಾಲೆಗಳು ಸೇರಿದಂತೆ ಒಟ್ಟು ಒಂದು ಸಾವಿರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಅರಂಭ ಮಾಡಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 69 ಶಾಲೆಗಳಿದ್ದು, 1,750 ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಪಡೆದಿದ್ದಾರೆ. ಈ ಮೂಲಕ 34 ಜಿಲ್ಲೆಗಳ ಪೈಕಿ ಮೊದಲ ಸ್ಥಾನ ಪಡೆದಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 1,740 ಹಾಗೂ ಬೆಂಗಳೂರು ಉತ್ತರದಲ್ಲಿ 1,544, ಬಳ್ಳಾರಿ 924, ದಾವಣಗೆರೆ 883 ಮತ್ತು ಬೆಳಗಾವಿಯಲ್ಲಿ 817 ವಿದ್ಯಾರ್ಥಿಗಳು ದಾಖಲಾಗುವ ಮೂಲಕ ದಾಖಲೆ ನಿರ್ಮಿಸಿವೆ.

ಒಂದನೆ ತರಗತಿಯಿಂದಲೇ ಹಂತ ಹಂತವಾಗಿ ದಾಖಲಾತಿ ಹೆಚ್ಚುಗೊಳಿಸುವ ಉದ್ದೇಶವನ್ನು ಶಿಕ್ಷಣ ಇಲಾಖೆ ಹೊಂದಿದೆ. ಸೆಪ್ಟೆಂಬರ್ ವೇಳೆಗೆ ಎಲ್ಲ ಪ್ರವೇಶಾತಿ ಅಂಕಿ-ಅಂಶಗಳನ್ನು ಪಡೆದುಕೊಂಡು ವಿಶ್ಲೇಷಣೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News