ಸಮಾಜ ಕಲ್ಯಾಣ ಇಲಾಖೆ ನೊಂದವರ ಧ್ವನಿಯಾಗಬೇಕು: ನೂತನ ಡಿಸಿಎಂ ಗೋವಿಂದ ಕಾರಜೋಳ

Update: 2019-08-27 12:48 GMT

ಬೆಂಗಳೂರು, ಆ.27: ಸಮಾಜ ಕಲ್ಯಾಣ ಇಲಾಖೆಯು ನೊಂದವರ ಧ್ವನಿಯಾಗಬೇಕು. ದಲಿತರಿಗೆ ಉತ್ತಮ ಕಾರ್ಯಕ್ರಮ ನೀಡಬೇಕು. ಎಸ್ಸಿ-ಎಸ್ಟಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಪರಿಮಿತಿಯೊಳಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೆ ತರಲಾಗುವುದು. ನಾಳೆ ಲೋಕೋಪಯೋಗಿ ಇಲಾಖೆಯ ಸಭೆ ಕರೆಯಲಾಗಿದೆ. ವಿವರವಾದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಪರಿಶೀಲನೆ ಕೈಗೊಳ್ಳಲಾಗುವುದು. ಮಳೆಯಿಂದ ಹಾನಿಯಾದ ರಸ್ತೆಗಳನ್ನು ಸರಿಪಡಿಸಲು ಮೊದಲ ಆದ್ಯತೆ ನೀಡಲಾಗಿದೆ. ಸೇತುವೆ, ಸರಕಾರಿ ಕಟ್ಟಡಗಳನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಮುಂದಿದೆ. ಎಷ್ಟು ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂಬ ಮಾಹಿತಿ ಕಲೆ ಹಾಕಿದ ಬಳಿಕ, ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರಕಾರ ಸೂಕ್ತವಾಗಿ ಸ್ಪಂದಿಸುತ್ತಿದೆ. ನಿನ್ನೆಯವರೆಗೆ ಬಾಗಲಕೋಟೆ ಜಿಲ್ಲೆಯಲ್ಲಿ 40 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲಾಗಿದೆ. ಎಲ್ಲ ಅರ್ಹ ಸಂತ್ರಸ್ತರಿಗೆ ಸರಕಾರದಿಂದ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಗೋವಿಂದ ಕಾರಜೋಳ ಹೇಳಿದರು. ದಶಕಗಳ ಕಾಲದಿಂದ ನನನ್ನು ಪ್ರೋತ್ಸಾಹಿಸಿ, ನನ್ನನ್ನು ಬೆಳೆಸುತ್ತಿರುವ ಮುಧೋಳ ಜನತೆ, ನನ್ನ ಮೇಲೆ ವಿಶ್ವಾಸವಿಟ್ಟು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News