ಆರ್‌ಬಿಐನಿಂದ ಹಿಂದೆಂದೂ ಇಷ್ಟೊಂದು ಹಣ ಪಡೆದಿಲ್ಲ: ಮಾಜಿ ಪ್ರಧಾನಿ ದೇವೇಗೌಡ

Update: 2019-08-29 15:22 GMT

ಬೆಂಗಳೂರು, ಆ. 29: ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಆರ್‌ಬಿಐನಿಂದ ಕೇಂದ್ರ ಸರಕಾರ 1.76 ಲಕ್ಷ ಕೋಟಿ ರೂ.ಗಳನ್ನು ಪಡೆದಿದ್ದು, ಹಿಂದೆಂದೂ ಇಷ್ಟೊಂದು ಮೊತ್ತ ಹಣವನ್ನು ಪಡೆದಿರಲಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಗುರುವಾರ ಇಲ್ಲಿನ ಜೆಪಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ವಿವಿಧ ಇಲಾಖೆ ಸರಕಾರಿ ನೌಕರರಿಗೆ ವೇತನ ನೀಡಲಿಲ್ಲ. ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಕರಣ ಮಾಡಲಾಗುತ್ತಿದ್ದು, ಆರ್ಥಿಕ ಸಂಕಷ್ಟದಿಂದ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆಂದು ಆತಂಕ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆ ಬಳಿಕ ದೇಶದಲ್ಲಿ 6 ಲಕ್ಷಕ್ಕೂ ಅಧಿಕ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಇನ್ನೂ ಹಲವು ಸರಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಗೆ ಕೊಡುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ ಅಶೋಕ ಹೊಟೇಲ್ ಮಾರಾಟ ಮಾಡಿದಂತೆ ಈಗಿನ ಬಿಜೆಪಿ ಸರಕಾರ ಕೆಲ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದರೂ ಅಚ್ಚರಿಯಿಲ್ಲ. ಏನೇನು ಮಾಡ್ತಾರೋ? ಗೊತ್ತಿಲ್ಲ. ಅಲ್ಲದೆ, ನಾನೂ ಲೋಕಸಭೆಯಲ್ಲಿ ಇಲ್ಲ ಎಂದು ದೇವೇಗೌಡ ಬೇಸರ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News