×
Ad

ಲಾರಿಗಳ ನಡುವೆ ಅಪಘಾತ; ಸುಟ್ಟು ಭಸ್ಮವಾದ ಲಾರಿ

Update: 2019-08-30 21:44 IST

ಭಟ್ಕಳ: ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ಮಧ್ಯರಾತ್ರಿ ಮುರ್ಡೇಶ್ವರ ಗೇಟ್ ಬಳಿ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕನೋರ್ವ ಗಂಭೀರ ಗಾಯಗೊಂಡಿದ್ದಾರೆ.

 ಮುರ್ಡೇಶ್ವರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ ಎರಡು ಲಾರಿಗಳು ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಲಾರಿಯಲ್ಲಿ ಸಿಲುಕಿಕೊಂಡಿದ್ದ ಚಾಲಕ ನೂರ್ ಮುಹಮ್ಮದ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು  ಸ್ಥಳೀಯ ಆರ್.ಎನ್.ಎಸ್  ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳ ತಿಳಿಸಿವೆ.

ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದರಿಂದ ಸ್ಥಳೀಯವಾಗಿ ಆತಂಕಕ್ಕೆ ಕಾರಣವಾಗಿತ್ತು. ಭಟ್ಕಳದಿಂದ ಆಗ್ನಿ ಶಾಮಕದಳವರು ತಲುಪುವಷ್ಟರಲ್ಲಿ ಲಾರಿ ಸಂಪೂರ್ಣವಾಗಿ ಸುಟ್ಟು ಭಸ್ಮಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದ ಮುರುಡೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಹದ್ದಾರಿ ಸಂಚಾರವನ್ನು ಸುಗಮಗೊಳಿಸುವಲ್ಲಿ ಸಹಕರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News