×
Ad

ವಿಪಕ್ಷಗಳ ವಿರುದ್ಧ ಕೇಂದ್ರದಿಂದ ಐಟಿ-ಈ.ಡಿ. ಬಳಕೆ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

Update: 2019-08-30 22:40 IST

ಕಲಬುರ್ಗಿ, ಆ. 30: ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ(ಇಡಿ)ವನ್ನು ವಿಪಕ್ಷಗಳ ವಿರುದ್ಧ ಅಸ್ತ್ರವಾಗಿ ಕೇಂದ್ರ ಸರಕಾರ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಈಡಿಯನ್ನು ವಿಪಕ್ಷಗಳ ವಿರುದ್ಧ ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗಿದೆ. ಕೇಂದ್ರ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಬೇರೆ ಪಕ್ಷ ದುರ್ಬಲ ಮಾಡುವ ಕೆಲಸ ಮಾಡುತ್ತಿದ್ದಾರೆಂದು ಟೀಕಿಸಿದರು.

ಕೆಲ ದಿನಗಳ ಹಿಂದೆ ಕೊಲೆ ಆರೋಪಿಯ ಹೇಳಿಕೆ ಆಧಾರದ ಮೇಲೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದ ಅವರು, ಸಿಬಿಐ, ಐಟಿ, ಈ.ಡಿ. ಎಲ್ಲವನ್ನೂ ಬಳಸಿ ಬ್ಲ್ಯಾಕ್‌ಮೇಲ್ ತಂತ್ರ ಮಾಡಲಾಗುತ್ತಿದೆ ಎಂದು ದೂರಿದರು.

ಇದೀಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡು ಬಂದಿಲ್ಲ. ಬಿಜೆಪಿ ಸರಕಾರ ರಾಜ್ಯದಲ್ಲಿ ಅಸ್ಥಿರವಾಗುತ್ತಿದೆ. ಹೀಗಾಗಿ ವಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕೆಂದು ಈ ರೀತಿ ಕೇಂದ್ರದ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News