×
Ad

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಸುಧಾಕರ್ ಅರ್ಹತೆ ಬಗ್ಗೆ ದಾಖಲೆ ಒದಗಿಸಿ: ಹೈಕೋರ್ಟ್

Update: 2019-08-30 23:18 IST

ಬೆಂಗಳೂರು, ಆ.30: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರು ಅಗತ್ಯ ಅರ್ಹತೆ ಹೊಂದಿರುವ ಬಗ್ಗೆ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. 

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಆಂಜನೇಯರೆಡ್ಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಸುಧಾಕರ್ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಯಾವುದೇ ಅನುಭವ ಮತ್ತು ಜ್ಞಾನ ಇಲ್ಲ, ಅವರನ್ನು ನೇಮಕ ಮಾಡುವಾಗ ಯಾವುದೇ ದಾಖಲೆಗಳ ಪರಿಶೀಲನೆಯನ್ನು ಸರಕಾರ ನಡೆಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಆಗುವವರು ಪರಿಸರ ಮಾಲಿನ್ಯ ನಿಯಂತ್ರಣದಲ್ಲಿ ವಿಜ್ಞಾನಿಗಳು, ಸಂಶೋಧನಾ ಸಂಸ್ಥೆ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಡಾ.ಕೆ.ಸುಧಾಕರ್ ಅವರನ್ನು ಯಾವ ಆಧಾರದ ಮೇಲೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದೀರಿ ಎಂದು ಸರಕಾರವನ್ನು ಪ್ರಶ್ನಿಸಿತು. ನೇಮಕಾತಿಗೆ ಹಾಗೂ ಅರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News